ನವದೆಹಲಿ: ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ನೀಡಿರುವ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಎರಡು ವಾರಗಳ ಕಾಲ ಮುಂದೂಡಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯ ಅಪಹರಣ ಮಾಡಿರುವ ಆರೋಪ ಭವಾನಿ ಮೇಲಿದೆ. ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು. ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಜುಲೈ 10ರಂದು ನಿರಾಕರಿಸಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು ಪ್ರಕರಣದ ಸ್ಥಿತಿಗತಿಯ ವಿವರಗಳಿರುವ ಪ್ರಮಾಣಪತ್ರವನ್ನು ಸಲ್ಲಿಸುವಂತೆ ಭವಾನಿ ಪರ ವಕೀಲ ಬಾಲಾಜಿ ಶ್ರೀನಿವಾಸನ್ ಅವರಿಗೆ ಸೂಚಿಸಿತು.
ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಇತರ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ ಮತ್ತು ಭವಾನಿ ರೇವಣ್ಣ ತನಿಖೆಗೆ ಸಹಕರಿಸಿದ್ದಾರೆ ಎಂದು ಶ್ರೀನಿವಾಸನ್ ಅವರು ನ್ಯಾಯಪೀಠದ ಗಮನಕ್ಕೆ ತಂದರು.