ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌ | ಆಸ್ಪತ್ರೆ ಮೇಲ್ದರ್ಜೆ ಕೋರಿಕೆ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

Published 19 ಜೂನ್ 2024, 15:29 IST
Last Updated 19 ಜೂನ್ 2024, 15:29 IST
ಅಕ್ಷರ ಗಾತ್ರ

ಬೆಂಗಳೂರು: ‘ಬೀದರ್ ಜಿಲ್ಲೆಯ ಕಮಲಾನಗರ, ಹುಲಸೂರ ಮತ್ತು ಚಿಟಗುಪ್ಪ ತಾಲ್ಲೂಕುಗಳ ಸರ್ಕಾರಿ ಆಸ್ಪತ್ರೆಗಳನ್ನು ತಾಲ್ಲೂಕು ಮಟ್ಟದ ಸಾರ್ವಜನಿಕ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೆ ಏರಿಸಬೇಕು ಮತ್ತು ಅಗತ್ಯ ವೈದ್ಯಕೀಯ ಸೇವೆಗಳನ್ನು ಕಲ್ಪಿಸಲು ನಿರ್ದೇಶಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಬೀದರ್ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕಲಬುರಗಿ ವಲಯದ ಪ್ರಾದೇಶಿಕ ಆಯುಕ್ತ, ಬೀದರ್ ಜಿಲ್ಲಾಧಿಕಾರಿ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿದೆ. ವಿಚಾರಣೆಯನ್ನು ಜುಲೈ 19ಕ್ಕೆ ಮುಂದೂಡಲಾಗಿದೆ.

ಅರ್ಜಿಯಲ್ಲಿ ಏನಿದೆ?: ‘ರಾಜ್ಯ ಸರ್ಕಾರ 2018ರಲ್ಲಿ ಕಮಲಾನಗರ, ಹುಲಸೂರ ಮತ್ತು ಚಿಟಗುಪ್ಪ ಪಟ್ಟಣಗಳನ್ನು ಹೊಸ ತಾಲ್ಲೂಕು ಕೇಂದ್ರಗಳನ್ನಾಗಿ ರಚನೆ ಮಾಡಿದೆ. ಆದರೆ, ಇಲ್ಲಿನ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಿಲ್ಲ. ಅಗತ್ಯ ವೈದ್ಯಕೀಯ ಸೇವೆಗಳು ಲಭ್ಯವಾಗದೆ ಈ ತಾಲ್ಲೂಕಿನ ಜನರು 50 ರಿಂದ 70 ಕಿ.ಮೀ ದೂರದಲ್ಲಿರುವ ನೆರೆಯ ತಾಲ್ಲೂಕುಗಳಿಗೆ ಹೋಗಬೇಕಾದ ದುಃಸ್ಥಿತಿ ಇದೆ. ಆದ್ದರಿಂದ, ಈ ಮೂರು ತಾಲ್ಲೂಕುಗಳ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವ ಅವಶ್ಯವಿದೆ’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

‘ಈ ನಿಟ್ಟಿನಲ್ಲಿ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. 2023ರ ನವೆಂಬರ್ 8ರಂದು ಸಲ್ಲಿಸಿರುವ ಮನವಿಯನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರ ಹಾಗೂ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶಿಸಬೇಕು’ ಎಂದು ಕೋರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT