ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಟ್‌ ಕಾಯಿನ್‌: ಅರ್ಜಿ ಹಿಂಪಡೆದ ಶ್ರೀಧರ ಪೂಜಾರ್‌

Published : 4 ಸೆಪ್ಟೆಂಬರ್ 2024, 16:27 IST
Last Updated : 4 ಸೆಪ್ಟೆಂಬರ್ 2024, 16:27 IST
ಫಾಲೋ ಮಾಡಿ
Comments

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದ ಆರೋಪಿಗಳನ್ನು ಅಕ್ರಮವಾಗಿ ವಶದಲ್ಲಿ ಇರಿಸಿಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್‌ ವರ್ಗಾವಣೆ ಮತ್ತು ಪಾಸ್‌ವರ್ಡ್‌ ಬದಲಾವಣೆ ಮಾಡಿದ ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿ ಶ್ರೀಧರ್ ಕೆ.ಪೂಜಾರ್ ಕಾಟನ್ ಪೇಟೆ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಲು ಹೈಕೋರ್ಟ್ ನಿರಾಕರಿಸಿದೆ.

ಈ ಸಂಬಂಧ ಶ್ರೀಧರ್ ಪೂಜಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ‘ಮೊದಲ ಪ್ರಕರಣದಲ್ಲಿ ಪೂಜಾರ್‌ ಅವರಿಗೆ ಜಾಮೀನು ದೊರೆತಿದೆ. ಈಗ ಕಾಟನ್ ಪೇಟೆ ಠಾಣೆಯ ಪ್ರಕರಣ ವಿಚಾರಣೆಗೆ ಕೈಗೆತ್ತಿಕೊಂಡಿದ್ದಾರೆ. ಈ ಭಯದಿಂದ ಮಧ್ಯಂತರ ಆದೇಶ ಪಡೆದಿದ್ದೇವೆ. ಹಾಗಾಗಿ, ಅರ್ಜಿ ವಿಚಾರಣೆ ಮುಂದೂಡಬೇಕು’ ಎಂದು ಕೋರಿದರು.

ಇದಕ್ಕೆ ನ್ಯಾಯಪೀಠ, ‘ಯಾವುದೇ ಕಾರಣಕ್ಕೂ ವಿಚಾರಣೆ ಮುಂದೂಡಲಾಗದು. ಅರ್ಜಿ ಊರ್ಜಿತಕ್ಕೆ ಸಂಬಂಧಿಸಿದ ಅಂಶಗಳ ಆಧಾರದಲ್ಲಿ ವಾದ ಮಂಡಿಸಿ. ಇಲ್ಲವಾದಲ್ಲಿ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಮಧ್ಯಂತರ ಆದೇಶ ತೆರವು ಮಾಡಲಾಗದು’ ಎಂದು ಖಡಕ್ ಆಗಿ ಎಚ್ಚರಿಸಿತು.

ಇದಕ್ಕೆ ಅರುಣ್ ಶ್ಯಾಮ್, ‘ಅರ್ಜಿ ಹಿಂಪಡೆಯಲು ಅವಕಾಶ ಕಲ್ಪಿಸಬೇಕು’ ಎಂದು ಮೆಮೊ ಸಲ್ಲಿಸಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಹಾಲಿ ಅರ್ಜಿಗೆ ಸಂಬಂಧಿಸಿದಂತೆ ಅರ್ಜಿದಾರರು ಎತ್ತಿರುವ ವಾದಾಂಶಗಳನ್ನು ಮುಕ್ತವಾಗಿರಿಸಿ, ಸೂಕ್ತ ಸಂದರ್ಭದಲ್ಲಿ ಸೂಕ್ತ ಪರಿಹಾರ ಕೋರಲು ಸ್ವತಂತ್ರರಾಗಿರುತ್ತಾರೆ’ ಎಂದು ಅರ್ಜಿ ವಿಲೇವಾರಿ ಮಾಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT