ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಧಾನಸಭೆ | ಕಾನೂನು ಸುವ್ಯವಸ್ಥೆ: ಚರ್ಚೆಗೆ ಬಿಜೆಪಿ ಆಗ್ರಹ

Published 13 ಡಿಸೆಂಬರ್ 2023, 14:30 IST
Last Updated 13 ಡಿಸೆಂಬರ್ 2023, 14:30 IST
ಅಕ್ಷರ ಗಾತ್ರ

ವಿಧಾನಸಭೆ: ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬುಧವಾರ ಆರೋಪಿಸಿದ ಬಿಜೆಪಿ ಸದಸ್ಯರು, ಈ ಕುರಿತು ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡುವಂತೆ ಆಗ್ರಹಿಸಿದರು.

ವಿಷಯ ಪ್ರಸ್ತಾಪಿಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್‌. ಅಶೋಕ, ‘ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂತು. ಜೂನ್‌ನಿಂದ ಸೆಪ್ಟೆಂಬರ್‌ ಅವಧಿಯಲ್ಲಿ ರಾಜ್ಯದಲ್ಲಿ 43,412 ಅಪರಾಧ ಪ್ರಕರಣಗಳು ದಾಖಲಾಗಿವೆ. ಕೊಲೆ, ಅತ್ಯಾಚಾರ, ದರೋಡೆ, ಹಲ್ಲೆಯಂತಹ ಘಟನೆಗಳು ಸರಣಿಯೋಪಾದಿಯಲ್ಲಿ ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ’ ಎಂದು ದೂರಿದರು.

ಚಿಕ್ಕಮಗಳೂರಿನಲ್ಲಿ ಪೊಲೀಸರು ವಕೀಲರ ಮೇಲೆ ಹಲ್ಲೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿದ ಕಾರಣಕ್ಕಾಗಿ ಸರ್ಕಾರದ ವಿರುದ್ಧ ಪೊಲೀಸರೇ ಪ್ರತಿಭಟನೆ ನಡೆಸಿದ್ದಾರೆ. ಇದು ಆಡಳಿತ ವ್ಯವಸ್ಥೆ ಬಿಗಿ ಕಳೆದುಕೊಂಡಿರುವುದರ ಸಂಕೇತ ಎಂದರು.

ಎಸ್‌ಪಿ ಅಮಾನತಿಗೆ ಆಗ್ರಹ: ‘ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸುತ್ತಿದ್ದೇವೆ. ಈ ಅವಧಿಯಲ್ಲೇ ಬೆಳಗಾವಿಯ ಎಸ್‌ಪಿ ಸುವರ್ಣ ವಿಧಾನಸೌಧದ ಎದುರಿನಲ್ಲೇ ತೊಡೆ ತಟ್ಟಿ ರೈತರನ್ನು ಬೆದರಿಸಿದ್ದಾರೆ. ಈ ಸರ್ಕಾರದಲ್ಲಿ ಹೇಳುವವರು, ಕೇಳುವವರು ಯಾರೂ ಇಲ್ಲವೆ? ಸರ್ಕಾರ ಬದುಕಿದೆಯೊ? ಸತ್ತಿದೆಯೊ? ಎಂಬ ಅನುಮಾನ ಕಾಡುತ್ತಿದೆ. ಸರ್ಕಾರ ಬದುಕಿದ್ದರೆ ಎಸ್‌ಪಿಯನ್ನು ತಕ್ಷಣ ಅಮಾನತು ಮಾಡಬೇಕು’ ಎಂದು ಆಗ್ರಹಿಸಿದರು.

ಕಾನೂನು ಸುವ್ಯವಸ್ಥೆ ವಿಷಯದಲ್ಲಿ ನಿಲುವಳಿ ಸೂಚನೆ ಮಂಡಿಸಲು ಅವಕಾಶವಿಲ್ಲ ಎಂದ ಸಭಾಧ್ಯಕ್ಷ ಯು.ಟಿ. ಖಾದರ್‌, ನಿಯಮ 69ರಡಿ ಚರ್ಚೆಗೆ ಅವಕಾಶ ಕಲ್ಪಿಸುವುದಾಗಿ ಪ್ರಕಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT