ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸುವವರ ವಿರುದ್ಧ ಸರ್ಕಾರ ಮೊಕದ್ದಮೆ ದಾಖಲಿಸುತ್ತಿರುವ ಹಿನ್ನೆಲೆಯಲ್ಲಿ, ಸಂತ್ರಸ್ತರಿಗೆ ಪರಿಹಾರ ಒದಗಿಸಲು ರಾಜ್ಯ ಮಟ್ಟದ ವಕೀಲರ ತಂಡವನ್ನು ಬಿಜೆಪಿ ರಚಿಸಿದೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವ್ ಪ್ರಸಾದ್ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರವು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ. ಕಳೆದ 100 ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರವನ್ನು ಟೀಕಿಸುವವರು ಮತ್ತು ಮಾಧ್ಯಮಗಳ ಪ್ರತಿನಿಧಿಗಳ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಬೆದರಿಸುವ ಕೆಲಸ ಮಾಡುತ್ತಿದೆ. ಇದು ಖಂಡನೀಯ ಎಂದು ಅವರು ಹೇಳಿದ್ದಾರೆ.
ರಾಜ್ಯ ಮಟ್ಟದ ವಕೀಲರ ತಂಡ ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂಬುದರ ಬಗ್ಗೆ ಭಾನುವಾರ ನಡೆದ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಉಪಾಧ್ಯಕ್ಷ ನಿರ್ಮಲ್‌ಕುಮಾರ್ ಸುರಾನ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮತ್ತು ಹಲವು ವಕೀಲರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.