ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಾದ್ಯಂತ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ

ಮೊದಲ ದಿನವೇ ಲಕ್ಷಕ್ಕೂ ಹೆಚ್ಚು ಹೊಸ ಸದಸ್ಯರ ನೋಂದಣಿ
Last Updated 21 ಜನವರಿ 2023, 16:17 IST
ಅಕ್ಷರ ಗಾತ್ರ

ಬೆಂಗಳೂರು: ಚುನಾವಣಾ ತಾಲೀಮು ಬಿರುಸುಗೊಳಿಸಿರುವ ಬಿಜೆಪಿ, ರಾಜ್ಯದಾದ್ಯಂತ ಹತ್ತು ದಿನಗಳ ಅವಧಿಯ ವಿಜಯ ಸಂಕಲ್ಪ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿತು. ಮೊದಲ ದಿನವೇ 40 ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಮತದಾರರ ನೋಂದಣಿ ಕಾರ್ಯಕ್ರಮ ನಡೆಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ವಿಜಯಪುರ ಜಿಲ್ಲೆಯ ನಾಗಠಾಣ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ನೋಂದಣಿ ಹಾಗೂ ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗಿಯಾದರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅಭಿಯಾನದಲ್ಲಿ ಭಾಗವಹಿಸಿದರು. ಬಿಜೆಪಿ ರಾಜ್ಯ ಉಸ್ತುವಾರಿಯಾಗಿರುವ ಅರುಣ್‌ ಸಿಂಗ್‌ ಚಿಕ್ಕಬಳ್ಳಾಪುರದಲ್ಲಿ ಹಾಗೂ ಸಹ ಪ್ರಭಾರಿಯಾಗಿರುವ ಡಿ.ಕೆ. ಅರುಣಾ ಅವರು ಬೆಂಗಳೂರಿನ ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಮತದಾರರ ನೋಂದಣಿ ಅಭಿಯಾನದಲ್ಲಿ ಪಾಲ್ಗೊಂಡರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ದಾವಣಗೆರೆಯಲ್ಲಿ ಅಭಿಯಾನದಲ್ಲಿ ಭಾಗಿಯಾದರು.

ಎಲ್ಲ ಸಚಿವರು ತಾವು ಉಸ್ತುವಾರಿ ಹೊಂದಿರುವ ಜಿಲ್ಲೆಗಳಲ್ಲಿ, ಬಿಜೆಪಿ ಶಾಸಕರು ತಾವು ಪ್ರತಿನಿಧಿಸುವ ಕ್ಷೇತ್ರಗಳಲ್ಲಿ ಹಾಗೂ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯರು ನಿಯೋಜಿತ ವಿಧಾನಸಭಾ ಕ್ಷೇತ್ರಗಳಲ್ಲಿ ವಿಜಯ ಸಂಕಲ್ಪ ಅಭಿಯಾನದ ನೇತೃತ್ವ ವಹಿಸಿದ್ದರು. ಮತಗಟ್ಟೆ ಹಂತದ ಸಮಿತಿಗಳಿಂದ ರಾಜ್ಯ ಘಟಕದವರೆಗೆ ಎಲ್ಲ ಹಂತಗಳ ಮುಖಂಡರು, ಪಕ್ಷದ ಕಾರ್ಯಕರ್ತರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ಲಕ್ಷಕ್ಕೂ ಹೆಚ್ಚು ಸದಸ್ಯರ ನೋಂದಣಿ: ‘ಹತ್ತು ದಿನಗಳ ಕಾಲ ವಿಜಯ ಸಂಕಲ್ಪ ಅಭಿಯಾನ ಹಾಗೂ ಮತದಾರರ ನೋಂದಣಿ ಕಾರ್ಯಕ್ರಮ ನಡೆಯಲಿದೆ. ಮೊದಲ ದಿನವಾದ ಶನಿವಾರ ರಾಜ್ಯದಾದ್ಯಂತ ಒಟ್ಟು ಒಂದು ಲಕ್ಷಕ್ಕೂ ಹೆಚ್ಚು ಸದಸ್ಯರ ನೋಂದಣಿ ಮಾಡಲಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಕಚೇರಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT