ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಹಾ ಹತ್ಯೆ ಖಂಡಿಸಿ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ

Published 22 ಏಪ್ರಿಲ್ 2024, 14:42 IST
Last Updated 22 ಏಪ್ರಿಲ್ 2024, 14:42 IST
ಅಕ್ಷರ ಗಾತ್ರ

ಬೆಂಗಳೂರು: ಹುಬ್ಬಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಮತ್ತು ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ನಡೆಸಿದರು. ವಿವಿಧ ಜಿಲ್ಲೆಗಳ ಕಾಲೇಜು ವಿದ್ಯಾರ್ಥಿಗಳೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಹುಬ್ಬಳ್ಳಿ–ಧಾರವಾಡ, ಮೈಸೂರು, ಕಾರವಾರ, ಹಾವೇರಿ, ಬೆಳಗಾವಿ, ಬಳ್ಳಾರಿ, ಬಾಗಲಕೋಟೆ, ಕಲಬುರಗಿ, ಚಿತ್ರದುರ್ಗ, ರಾಮನಗರ, ಮಂಡ್ಯ, ವಿಜಯನಗರ, ದಾವಣಗೆರೆ, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಕೆಲವು ಕಡೆಗಳಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಹಮ್ಮಿಕೊಂಡಿದ್ದ ಪ್ರತಿಭಟನೆಗಳಲ್ಲೂ ಬಿಜೆಪಿ ನಾಯಕರು ಪಾಲ್ಗೊಂಡು ಮಾತನಾಡಿದರು.

ಮೈಸೂರಿನಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಗಾಂಧಿಚೌಕದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ‘ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಲವ್‌ ಜಿಹಾದ್‌ ನಡೆಯುತ್ತಿದ್ದರೂ ಏನೂ ನಡೆಯುತ್ತಿಲ್ಲ ಎಂದು ಸರ್ಕಾರ ಕೈಕಟ್ಟಿ ಕುಳಿತಿದೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಹಳೇಹುಬ್ಬಳ್ಳಿ ಇಂಡಿಪಂಪ್‌ ವೃತ್ತದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಕೊಲೆ ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆ ವಿಧಿಸಲೇಬೇಕು. ಸರ್ಕಾರ ಕೊಲೆಗಡುಕರಿಗೆ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದ ಕಾರ್ಯಕರ್ತರು ವೃತ್ತದ ಮಧ್ಯೆ ಧರಣಿ ನಡೆಸಿದರು. 

ತುಮಕೂರಿನಲ್ಲಿ ವಿರೋಧಪಕ್ಷದ ನಾಯಕ ಆರ್‌.ಅಶೋಕ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳ ರಕ್ತಕ್ಕೆ ಬೆಲೆಯೇ ಇಲ್ಲವಾಗಿದೆ. ರಾಜ್ಯದಲ್ಲಿ ತಾಲಿಬಾನ್‌ ಸರ್ಕಾರ ನಡೆಯುತ್ತಿದೆ ಎಂದು ಕಿಡಿಕಾರಿದರು.

ಹಾವೇರಿಯಲ್ಲಿ ಎಬಿವಿಪಿ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ರಾಜ್ಯದ ಪೊಲಿಸರ ಮೇಲೆ ನಂಬಿಕೆ ಇಲ್ಲ ಎಂದು ನೇಹಾ ತಂದೆ ಹೇಳಿದ್ದಾರೆ. ಸರ್ಕಾರದ ನಡೆವಳಿಕೆಯಿಂದ ಬೇಸತ್ತ ಅವರು, ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡಬೇಕು ಎಂ‌ದಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಿ, ನೇಹಾಗೆ ನ್ಯಾಯ ಸಿಗುವವರೆಗೂ ನಾವು ಹೋರಾಟ ನಿಲ್ಲಿಸುವುದಿಲ್ಲ’ ಎಂದು ಎಚ್ಚರಿಸಿದರು.

ಕಾರವಾರದಲ್ಲಿ  ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ‍್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಮುಖ್ಯಮಂತ್ರಿ ಮತ್ತು ಗೃಹ ಸಚಿವರ ವಿರುದ್ಧ ಹರಿಹಾಯ್ದರಲ್ಲದೇ, ನೇಹಾ ಹತ್ಯೆಯ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT