ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

80 ದಿನಗಳಲ್ಲಿ 50 ರೈತರ ಆತ್ಮಹತ್ಯೆ: ಸಿ.ಟಿ.ರವಿ

ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
Published 9 ಆಗಸ್ಟ್ 2023, 16:07 IST
Last Updated 9 ಆಗಸ್ಟ್ 2023, 16:07 IST
ಅಕ್ಷರ ಗಾತ್ರ

ಬೆಂಗಳೂರು: ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲಿ ಮುಳುಗಿರುವ ಕಾಂಗ್ರೆಸ್‌ ಸರ್ಕಾರದ 80 ದಿನಗಳ ಅವಧಿಯಲ್ಲಿ 50ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲುಷಿತ ನೀರು ಸೇವಿಸಿ ಹಲವರು ಮೃತಪಟ್ಟಿದ್ದಾರೆ. ಈ ಸರ್ಕಾರವೂ ಬದುಕಿಲ್ಲ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಹರಿಹಾಯ್ದಿದ್ದಾರೆ.

ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಬಿಜೆಪಿ ಮಹಾನಗರ ರೈತ ಮೋರ್ಚಾ ವತಿಯಿಂದ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀರಾವರಿಗೆ ಹಣ ಇಟ್ಟಿಲ್ಲ. ಕಿಸಾನ್‌ ಸಮ್ಮಾನ್‌, ರೈತ ವಿದ್ಯಾನಿಧಿ, ಭೂಸಿರಿ ಸೇರಿ ಅನೇಕ ಯೋಜನೆಗಳನ್ನು ರದ್ದುಪಡಿಸುವ ಮೂಲಕ ರೈತರ ಬೆನ್ನುಮೂಳೆ ಮುರಿಯಲು ಮುಂದಾಗಿದೆ ಎಂದು ಟೀಕಿಸಿದರು.

ಮತ ಬ್ಯಾಂಕಿನ ರಾಜಕಾರಣಕ್ಕಾಗಿ ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡಿ ರೈತರ ಸರ್ವನಾಶ ಮಾಡಲು ಕಾಂಗ್ರೆಸ್‌ ಸರ್ಕಾರ ಹೊರಟಿದೆ ಎಂದು ಟೀಕಿಸಿದ ಅವರು, ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆ ಯೋಜನೆ ಜಾರಿಗೊಳಿಸಿದೆ. ರಾಜ್ಯವೂ ಬೆಂಬಲ ಬೆಲೆ ಯೋಜನೆ ಜಾರಿ ಮಾಡಬೇಕು. ರಾಗಿ ಖರೀದಿಯನ್ನು ಕೂಡಲೇ ಆರಂಭಿಸಬೇಕು ಎಂದು ಆಗ್ರಹಿಸಿದರು.

ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಕೇಂದ್ರದ ₹6,000 ಜತೆ, ಹೆಚ್ಚುವರಿಯಾಗಿ ರಾಜ್ಯ ಸರ್ಕಾರ ನೀಡುತ್ತಿದ್ದ ₹4,000 ನಿಲ್ಲಿಸಲಾಗಿದೆ. ಕ್ಷೀರ ಸಮೃದ್ಧಿ ಬ್ಯಾಂಕ್‌, ಗೋಶಾಲೆ ಯೋಜನೆಗಳನ್ನೂ ನಿಲ್ಲಿಸಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಲ್ಲ ದೃಷ್ಟಿಯಿಂದಲೂ ರೈತ ವಿರೋಧಿ ನಿಲುವು ತಳೆದಿದೆ. ರೈತರ ಪರವಾಗಿದ್ದ ಎಪಿಎಂಸಿ ಕಾಯ್ದೆಯನ್ನು ದಲ್ಲಾಳಿಗಳ ಪರವಾಗಿ ಮಾಡಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಎಸ್‌ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ರೈತ ಮೋರ್ಚಾ ಉಪಾಧ್ಯಕ್ಷ ಲೋಕೇಶ್ ಗೌಡ, ಬೆಂಗಳೂರು ಉತ್ತರ ಮೋರ್ಚಾ ಜಿಲ್ಲಾಧ್ಯಕ್ಷ ಸತೀಶ್‌ ಕಡತನಮಲೆ, ಬೆಂಗಳೂರು ಕೇಂದ್ರ ಮೋರ್ಚಾ ಜಿಲ್ಲಾಧ್ಯಕ್ಷ ರುದ್ರಪ್ಪ, ಬೆಂಗಳೂರು ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಮತ್ತು ಇತರರ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT