ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೆ ದಾಳಿಗೆ ಮೃತಪಟ್ಟ ಕೇರಳದ ವ್ಯಕ್ತಿಗೆ ಕರ್ನಾಟಕ ಸರ್ಕಾರದಿಂದ ಪರಿಹಾರ: BJP ಕಿಡಿ

Published 20 ಫೆಬ್ರುವರಿ 2024, 2:38 IST
Last Updated 20 ಫೆಬ್ರುವರಿ 2024, 2:38 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಸೆರೆಹಿಡಿಯಲಾದ ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರವು ಪರಿಹಾರ ಹಣದ ರೂಪವಾಗಿ ₹15 ಲಕ್ಷವನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.

‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡು ಸಂಸದರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ತೆರಿಗೆದಾರರ ಹಣವನ್ನು ಕಾಂಗ್ರೆಸ್‌ ದುರುಪಯೋಗಪಡಿಸಿಕೊಳ್ಳುತ್ತಿದೆ. ಅಲ್ಲದೇ ಕರ್ನಾಟಕದಲ್ಲಿ ಸೆರೆಹಿಡಿಯಲಾದ ಆನೆಯ ತುಳಿತಕ್ಕೊಳಗಾಗಿ ಕೇರಳದ ಅಜೀಶ್‌ ಮೃತಪಟ್ಟಿದ್ದಾರೆ ಎಂದು ಸುಳ್ಳು ಹಬ್ಬಿಸಲಾಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ.

‘ಬರಗಾಲದಿಂದ ರಾಜ್ಯದಾದ್ಯಂತ ನೂರಾರು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ತುರ್ತು ಅಗತ್ಯಗಳ ಬಗ್ಗೆ ಗಮನಹರಿಸುವ ಬದಲು ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಕಾಂಗ್ರೆಸ್ ನಾಯಕರು ಹೊರಟಿದ್ದಾರೆ’ ಎಂದರು.

‘ಮೃತ ಅಜೀಶ್‌ ಅವರ ಕುಟುಂಬಕ್ಕೆ ಪರಿಹಾರ ನೀಡಲಾಗುವುದು’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸೋಮವಾರ ತಿಳಿಸಿದ್ದರು.

‘ಅಜೀಶ್‌ ಕುಟುಂಬಕ್ಕೆ ಪರಿಹಾರ ನೀಡುವಂತೆ ಕೇರಳದ ಜನಪ್ರತಿನಿಧಿಗಳು ಮತ್ತು ಅಲ್ಲಿನ ಸರ್ಕಾರವು ಕರ್ನಾಟಕ ಸರ್ಕಾರವನ್ನು ಕೋರಿತ್ತು. ಈ ಕುರಿತು ಮುಖ್ಯಮಂತ್ರಿಯವರ ಜತೆ ಮಾತನಾಡಿದ್ದು, ಪರಿಹಾರ ನೀಡಲು ಮುಖ್ಯಮಂತ್ರಿಯವರು ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಅವರು ತಿಳಿಸಿದ್ದರು.

ಪ್ರಕರಣವೇನು?

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನಲ್ಲಿ ದಂತರಹಿತ ಗಂಡು ಆನೆಯನ್ನು ಕಳೆದ ವರ್ಷದ ನವೆಂಬರ್‌ 30ರಂದು ಸೆರೆ ಹಿಡಿಯಲಾಗಿತ್ತು. ನಂತರ ಈ ಆನೆಯನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳಿಸಲಾಗಿತ್ತು. ಈ ಆನೆಯು ಸುಮಾರು ಎರಡು ತಿಂಗಳ ನಂತರ ಕೇರಳ ರಾಜ್ಯದ ವಯನಾಡು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿತ್ತು. ಫೆಬ್ರುವರಿ 10ರ ಬೆಳಿಗ್ಗೆ ವಯನಾಡು ಜಿಲ್ಲೆಯ ಬೇಗೂರಿನ ಚತಿಗಡದಲ್ಲಿ ಈ ಆನೆಯೊಂದಿಗೆ ಸಂಘರ್ಷದ ಘಟನೆಯಲ್ಲಿ ಅಜೀಶ್‌ ಪ್ರಾಣ ಕಳೆದುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT