ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೋಗಸ್‌ ಜಾತಿ ಪ್ರಮಾಣ ಪತ್ರ: ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

Published 12 ಆಗಸ್ಟ್ 2024, 15:50 IST
Last Updated 12 ಆಗಸ್ಟ್ 2024, 15:50 IST
ಅಕ್ಷರ ಗಾತ್ರ

ಬೆಂಗಳೂರು: ‘ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣ ಪಡೆದುಕೊಂಡ ಪ್ರಕರಣಗಳಲ್ಲಿ ಈತನಕ ಎಷ್ಟು ಜನರಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಮತ್ತು ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸಿ’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಸಂಬಂಧ ಯಾದಗಿರಿ ಜಿಲ್ಲೆ ಮಗದುಂಪುರದ, ‘ರಾಜ್ಯ ಎಸ್‌ಸಿ-ಎಸ್‌ಟಿ ನಕಲಿ ಜಾತಿ ಪ್ರಮಾಣಪತ್ರಗಳ ತಡೆ ಸಮಿತಿ’ ಪ್ರಧಾನ ಕಾರ್ಯದರ್ಶಿ ಮಾರಪ್ಪ ನಾಯಕ ಸೇರಿದಂತೆ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲೆ ಅಶ್ವಿನಿ ಓಬಳೇಶ್, ‘ರಾಜ್ಯದಲ್ಲಿ ಸುಮಾರು 30 ಸಾವಿರ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ವಿತರಿಸಲಾಗಿದೆ ಎಂಬ ಮಾಹಿತಿ ಇದೆ. ಆದರೆ, ಸರ್ಕಾರ ಈ ಕುರಿತು ಯಾವುದೇ ಕ್ರಮ ಜರುಗಿಸಿಲ್ಲ’ ಎಂದು ಆರೋಪಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರದ ವಿಶೇಷ ವಕೀಲ ಸಿ.ಜಗದೀಶ್, ‘ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಮೊದಲಿಗೆ ಕಬ್ಬಲಿಗ ಜಾತಿ ಪ್ರಮಾಣ ಪತ್ರ ತೆಗೆದುಕೊಂಡು ಬಳಿಕ ಪರಿವಾರ ನಾಯಕ ಜಾತಿ ಪ್ರಮಾಣ ಪಡೆದುಕೊಂಡವರ ವಿರುದ್ಧ ನೋಟಿಸ್ ನೀಡಲಾಗಿದೆ’ ಎಂದರು.

ಅರ್ಜಿಯಲ್ಲಿ ಏನಿದೆ?: ‘ನಾಯಕ ಜನಾಂಗದ ಪರಿವಾರ ಮತ್ತು ತಳವಾರ ಉಪಪಂಗಡಗಳನ್ನು ಮಾತ್ರ ಎಸ್‌ಟಿ ವರ್ಗಕ್ಕೆ ಸೇರಿಸಲಾಗಿದೆ, ಆದರೆ, ಪ್ರವರ್ಗ ಒಂದರಲ್ಲಿ ಬರುವ ಬೆಸ್ತರ ಉಪಜಾತಿಯಾದ ಪರಿವಾರ ಹಾಗೂ ತಳವಾರ ಬೋಯಾ ಉಪಪಂಗಡದವರಿಗೂ ಪರಿಶಿಷ್ಟ ವರ್ಗದ ನಕಲಿ ಜಾತಿ ಪ್ರಮಾಣಪತ್ರಗಳನ್ನು ವಿತರಿಸಲಾಗುತ್ತಿದೆ’ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಮಧ್ಯಂತರ ಅರ್ಜಿ: ಇದೇ ವೇಳೆ ‘ಕರ್ನಾಟಕ ರಾಜ್ಯ ತಳವಾರ ಮಹಾಸಭಾ’ದ ರಾಜ್ಯ ಘಟಕದ ಅಧ್ಯಕ್ಷ ಸಿದ್ದರಾಮ ಸಿ.ಜೇರಟಗಿ ಪರ ವಕೀಲ ಎಚ್‌.ಸುನಿಲ್ ಕುಮಾರ್ ಮಧ್ಯಂತರ ಅರ್ಜಿ ಸ‌ಲ್ಲಿಸಿ, ‘ವಿರೋಧಿ ಅರ್ಜಿದಾರರ ತಪ್ಪು ಮಾಹಿತಿಯಿಂದಾಗಿ ನೈಜ ತಳವಾರ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಹಾಗಾಗಿ, ಈ ಪ್ರಕರಣದಲ್ಲಿ ತಳವಾರ ಮಹಸಭಾವನ್ನು ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಿಕೊಳ್ಳಬೇಕು’ ಎಂದು ಮನವಿ ಮಾಡಿದರು. ಈ ಮಧ್ಯಂತರ ಅರ್ಜಿಯನ್ನು ಸ್ವೀಕರಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 18ಕ್ಕೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT