ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಚೋದನಕಾರಿ ಭಾಷಣ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧದ ಪ್ರಕರಣಕ್ಕೆ ತಡೆ

Published 15 ಮಾರ್ಚ್ 2024, 15:36 IST
Last Updated 15 ಮಾರ್ಚ್ 2024, 15:36 IST
ಅಕ್ಷರ ಗಾತ್ರ

ಬೆಂಗಳೂರು: ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.

ಪ್ರಕರಣ ರದ್ದುಪಡಿಸುವಂತೆ ಕೋರಿ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠ’ದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಶುಕ್ರವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಯತ್ನಾಳ್ ಪರ ವಾದ ಮಂಡಿಸಿದ ವಕೀಲ ವೆಂಕಟೇಶ ಪಿ.ದಳವಾಯಿ, ‘ದೂರಿನಲ್ಲಿ ಆರೋಪಿಸಿರುವಂತೆ ಅರ್ಜಿದಾರರ ಭಾಷಣವು ಕೋಮು ಗಲಭೆಗೆ ಪ್ರಚೋದನೆ ನೀಡಿಲ್ಲ. ಏಕೆಂದರೆ, ಅವರ ಭಾಷಣದ ಬಳಿಕ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಆದ್ದರಿಂದ, ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ವಿಚಾರಣೆಗೆ ತಡೆ ನೀಡಿತು. ಪ್ರಾಸಿಕ್ಯೂಷನ್‌ ಪರ ರಾಜ್ಯ ಪಬ್ಲಿಕ್‌ ಪ್ರಾಸಿಕ್ಯೂಟರ್–2 ಬಿ.ಎನ್‌.ಜಗದೀಶ್‌ ಹಾಜರಿದ್ದರು.

ಪ್ರಕರಣವೇನು?: 'ವಿಜಯಪುರ ನಗರದಲ್ಲಿ ಇದೇ 3ರಂದು ಆಯೋಜಿಸಲಾಗಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತೆಲಂಗಾಣದ ಗೋಶಾ ಮಹಲ್‌ ವಿಧಾನಸಭಾ ಕ್ಷೇತ್ರದ ಶಾಸಕ ರಾಜಾಸಿಂಗ್ ಲೋಧಾ ಭಾಗವಹಿಸಿದ್ದರು. ವೇದಿಕೆಯಲ್ಲಿ ಭಾಷಣ ಮಾಡುವಾಗ ಇಬ್ಬರೂ ಪ್ರಚೋದನಕಾರಿ ಮತ್ತು ಎರಡು ಸಮುದಾಯಗಳ ಮಧ್ಯೆ ವೈಷಮ್ಯ ಹುಟ್ಟುಹಾಕುವ ಮಾತುಗಳನ್ನಾಡಿದ್ದಾರೆ’ ಎಂದು ಸ್ಥಳೀಯ ನಿವಾಸಿ ಅಬೂಬಕರ್ ರಾಜೇಸಾಬ್ ಕಂಬಾಗಿ ದೂರು ನೀಡಿದ್ದರು. ಇದನ್ನು ಆಧರಿಸಿ ಗಾಂಧಿಚೌಕ ಠಾಣೆ ಪೋಲಿಸರು ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT