ಬೆಂಗಳೂರು: ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಬುಧವಾರ ಪ್ರತಿಭಟನೆ ನಡೆಸಿದವು.
ಎರಡೂ ಪಕ್ಷಗಳ ಶಾಸಕರು, ಸಂಸದರು, ಮಾಜಿ ಶಾಸಕರು ಮತ್ತು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಎರಡೂ ಪಕ್ಷಗಳ ಬಾವುಟಗಳನ್ನು ಹಿಡಿದು ಪ್ರತಿಭಟನಾ ನಿರತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ಡಿ.ವಿ. ಸದಾನಂದ ಗೌಡ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ, ‘ಕಾಂಗ್ರೆಸ್ ಪಕ್ಷವು ಡಿಎಂಕೆ ಜತೆಗಿನ ಹೊಂದಾಣಿಕೆ ರಾಜಕಾರಣಕ್ಕಾಗಿ ರಾಜ್ಯದ ಜನರಿಗೆ ದ್ರೋಹ ಬಗೆಯುತ್ತಿದೆ’ ಎಂದರು.
‘ರಾಜ್ಯ ಸರ್ಕಾರವು ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಈ ಧೋರಣೆ ಖಂಡನೀಯ’ ಎಂದರು.
‘ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಜನರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಜನರ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಎಲ್ಲ ರೀತಿಯ ಬೆಂಬಲ ನೀಡಲಿವೆ. ಸರ್ಕಾರ ಈ ಹಂತದಲ್ಲಾದರೂ ತನ್ನ ನಿಲುವನ್ನು ಬದಲಿಸಿಕೊಳಬೇಕು. ಇಲ್ಲವಾದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಅಪಾಯವಿದೆ. ಅದಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ’ ಎಂದು ಹೇಳಿದರು.
ನಳಿನ್ ಕುಮಾರ್ ಕಟೀಲ್ ಮಾತನಾಡಿ, ‘ರಾಜ್ಯ ಸರ್ಕಾರವು ಡಿಎಂಕೆ ಪ್ರಮುಖರು ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಜತೆ ಮಾತುಕತೆ ನಡೆಸುತ್ತಿಲ್ಲ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಸ್ಟಾಲಿನ್ ಮನವೊಲಿಸಿದರೆ ಸಮಸ್ಯೆ ಇತ್ಯರ್ಥವಾಗುತ್ತದೆ. ಅವರಿಬ್ಬರ ಜತೆ ಮಾತನಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಧೈರ್ಯವಿಲ್ಲ’ ಎಂದು ಟೀಕಿಸಿದರು.
ಇವರು ಯಾವ ರಾಜ್ಯದ ಡಿಸಿಎಂ?
‘ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಬೇಕೆಂಬ ತೀರ್ಮಾನದಿಂದ ಸಂತೋಷವಾಗಿದೆ ಎಂದು ನಮ್ಮ ಜಲ ಸಂಪನ್ಮೂಲ ಸಚಿವರು ಹೇಳಿದ್ದಾರೆ. ಇವರು ಕರ್ನಾಟಕದ ಉಪ ಮುಖ್ಯಮಂತ್ರಿಯೋ? ಅಥವಾ ತಮಿಳುನಾಡಿನ ಏಜೆಂಟರಾ’ ಎಂದು ಡಿ.ಕೆ. ಶಿವಕುಮಾರ್ ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.
‘ಬಹುಪಾಲು ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ. ಆದರೂ ನಮ್ಮ ಸಚಿವರು ಸಂತೋಷಪಡುತ್ತಿದ್ದಾರೆ. ರಾಜ್ಯದ ಜನರಿಗೆ ಅನ್ಯಾಯ ಮಾಡಿರುವ ಬಗ್ಗೆ ಅವರಿಗೆ ಕಿಂಚಿತ್ತೂ ಪಶ್ಚಾತ್ತಾಪವಿಲ್ಲ’ ಎಂದು ವಾಗ್ದಾಳಿ ನಡೆಸಿದರು.
ಜೆಡಿಎಸ್ ಬಾವುಟ ಹಿಡಿದ ಮುನಿರತ್ನ
ರಾಜ್ಯ ಸರ್ಕಾರದ ವಿರುದ್ಧ ನಡೆದ ಜಂಟಿ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಜೆಡಿಎಸ್ ಪಕ್ಷದ ಬಾವುಟ ಹಿಡಿದು ಭಾಗಿಯಾಗಿದ್ದು ಗಮನ ಸೆಳೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.