ಬೆಂಗಳೂರು: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಪರೀಕ್ಷೆಯನ್ನು ಕನ್ನಡ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ.
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಪರೀಕ್ಷೆ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಪರೀಕ್ಷೆಯನ್ನು ಕನ್ನಡ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಆಯೋಜಿಸಲು ಮುಂದಾಗಿರುವುದು ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರ ಎಂದು ಹೇಳಿದ್ದಾರೆ.
‘ಸ್ವತಂತ್ರ ಭಾರತದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸರ್ಕಾರವೊಂದು ಇಂತಹ ನಿರ್ಣಯ ಕೈಗೊಂಡು ಸ್ಥಳೀಯ ಭಾಷೆಗಳಿಗೆ ಗೌರವ ನೀಡುವ ಹಾಗೂ ಅಭಿವೃದ್ಧಿಗೆ ಪೂರಕವಾದ ಕಾರ್ಯವನ್ನು ಮಾಡಿದೆ. ಈ ನಿರ್ಣಯದಿಂದ ರಾಜ್ಯದ ಹೆಚ್ಚು ಅಭ್ಯರ್ಥಿಗಳಿಗೆ ಈ ಸೇವೆಗೆ ಸೇರುವ ಅವಕಾಶ ದೊರೆಯಲಿದೆ’ ಎಂದು ತಿಳಿಸಿದ್ದಾರೆ.
‘ಈ ಐತಿಹಾಸಿಕ ಹಾಗೂ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಂಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಅಭಿನಂದಿಸುತ್ತೇನೆ’ ಎಂದಿದ್ದಾರೆ.
‘ದಶಕಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್, ಭಾರತೀಯ ಭಾಷೆಗಳ ಬೆಳವಣಿಗೆಗೆ ಬೇಕಾದ ಕ್ರಮಗಳನ್ನು ಕೈಗೊಳ್ಳಲೇ ಇಲ್ಲ. ಆದರೆ, ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂದು ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ದೇಶದ ಎಲ್ಲ ಭಾಷೆಗಳಲ್ಲಿ ನಡೆಸುವ ಮೂಲಕ ಭಾಷಾ ಬೆಳವಣಿಗೆಗೆ ಪ್ರೋತ್ಸಾಹದ ಜತೆಗೆ ಸ್ಥಳೀಯರಿಗೆ ಉದ್ಯೋಗಕ್ಕೆ ನೆರವಾಗಿದೆ’ ಎಂದು ಕೊಂಡಾಡಿದ್ದಾರೆ.
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಪರೀಕ್ಷೆಯನ್ನು ಕನ್ನಡ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಆಯೋಜಿಸುವ ಐತಿಹಾಸಿಕ ನಿರ್ಧಾರವನ್ನು ಪ್ರಧಾನ ಮಂತ್ರಿ ಶ್ರೀ @narendramodi ಅವರ ನೇತೃತ್ವದ ಸರ್ಕಾರ ಕೈಗೊಂಡಿದೆ. pic.twitter.com/nNK9o2nD7P
— Pralhad Joshi (@JoshiPralhad) April 15, 2023
ಈ ಐತಿಹಾಸಿಕ ಹಾಗೂ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಂಡಿದ್ದಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಹಾಗೂ ಗೃಹ ಸಚಿವ ಶ್ರೀ @AmitShah ಅವರನ್ನು ನಾನು ಹೃದಯಪೂರ್ವಕವಾಗಿ ಅಭಿನಂದಿಸುತ್ತೇನೆ.
— Pralhad Joshi (@JoshiPralhad) April 15, 2023
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.