ಮಂಗಳವಾರ, 5 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ ಹಾನಿ; ತುರ್ತು ಪರಿಹಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ರಕ್ಷಣಾ ಕಾರ್ಯಕ್ಕೆ ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ತಂಡ; ಜಿಲ್ಲಾಧಿಕಾರಿಗಳ ಜತೆ ಸಿಎಂ ಸಂವಾದ
Last Updated 8 ಜುಲೈ 2022, 14:28 IST
ಅಕ್ಷರ ಗಾತ್ರ

ಬೆಂಗಳೂರು: ಮಳೆ ಮತ್ತು ಪ್ರವಾಹದಿಂದ ಜೀವಹಾನಿಯಾದ ಕುಟುಂಬಗಳಿಗೆ ಹಾಗೂ ಮನೆ ಹಾನಿಗೆ ತಕ್ಷಣವೇ ಪರಿಹಾರ ನೀಡಬೇಕು. ರಕ್ಷಣಾ ಕಾರ್ಯಕ್ಕೆ ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ತಂಡಗಳನ್ನು ಬಳಸಿಕೊಳ್ಳುವಂತೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

ಮಳೆ ಮತ್ತು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎಸ್ಪಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಶುಕ್ರವಾರ ವಿಡಿಯೊ ಸಂವಾದದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ‘ಕಳೆದ ಒಂದು ತಿಂಗಳಲ್ಲಿ ಮಳೆ– ಪ್ರವಾಹದಿಂದಾಗಿ 12 ಮಂದಿ ಸಾವನ್ನಪ್ಪಿದ್ದು, 65 ಜಾನುವಾರುಗಳ ಜೀವ ಹಾನಿಯಾಗಿದೆ ಎಂದು ಹೇಳಿದರು.

ಪ್ರವಾಹ ಪೀಡಿತ ಜಿಲ್ಲೆಗಳ ಸಂಪೂರ್ಣ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಅವರು, ‘ತಕ್ಷಣವೇ ಮನೆ ಹಾನಿ ಆದವರಿಗೆ ತಲಾ ₹10 ಸಾವಿರ ತುರ್ತು ಪರಿಹಾರ ನೀಡಬೇಕು’ ಎಂದು ಅವರು ನಿರ್ದೇಶನ ನೀಡಿದರು.

‘ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಬಳಿ ಒಟ್ಟು ₹ 735.59 ಕೋಟಿ ಲಭ್ಯವಿದೆ. ಪರಿಹಾರ ಕಾರ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ. ಅಲ್ಲದೆ, ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಯಲ್ಲಿ ಸಾಕಷ್ಟು ಅನುದಾನ ಲಭ್ಯವಿದ್ದು, ಅದನ್ನು ಪರಿಹಾರ ಕಾರ್ಯಗಳಿಗೆ ಸದ್ಬಳಕೆ ಮಾಡಬೇಕು. ಪರಿಹಾರ ಕಾರ್ಯದಲ್ಲಿ ತೊಡಕುಗಳಾದರೆ, ವಿಪತ್ತು ನಿರ್ವಹಣೆ ವಿಭಾಗದ ಅಧಿಕಾರಿಗಳ ಮಾರ್ಗದರ್ಶನದೊಂದಿಗೆ ಕಾರ್ಯ ನಿರ್ವಹಿಸಬೇಕು’ ಎಂದು ಬೊಮ್ಮಾಯಿ ತಿಳಿಸಿದರು.

‘ಗ್ರಾಮಗಳ ಮಟ್ಟದಲ್ಲಿ ಕಾರ್ಯಪಡೆಗಳನ್ನು ರಚಿಸುವುದರ ಜತೆಗೆ ನಿಯಂತ್ರಣ ಕೊಠಡಿಯನ್ನೂ ಸ್ಥಾಪಿಸಬೇಕು. ಈ ಮೂಲಕ ಗ್ರಾಮಗಳ ಜತೆಗೆ ನೇರ ಸಂಪರ್ಕವನ್ನು ಹೊಂದಬೇಕು. ಪೊಲೀಸರು ಸೇವೆಗೆ ದಿನದ 24 ಗಂಟೆಯೂ ಲಭ್ಯರಿರಬೇಕು’ ಎಂದರು.

‘ಮನೆಗಳಿಗೆ ಆಗಿರುವ ಹಾನಿಯ ಪ್ರಮಾಣವನ್ನು ನಿಯಮಾನುಸಾರ ಅಂದಾಜು ಮಾಡಿ, ವರ್ಗೀಕರಿಸಿ, ರಾಜೀವ್‌ಗಾಂಧಿ ವಸತಿ ನಿಗಮದ ತಂತ್ರಾಂಶದಲ್ಲಿ ಅಪ್‌ಲೋಡ್‌ ಮಾಡಿ ಪರಿಹಾರ ವಿತರಿಸಲು ಕ್ರಮ ತೆಗೆದುಕೊಳ್ಳಬೇಕು. ಬೆಳೆ ಹಾನಿ, ಮೂಲಸೌಕರ್ಯಗಳ ಹಾನಿಯನ್ನು ಮಳೆ ನಿಂತ ಕೂಡಲೇ ಸಮೀಕ್ಷೆ ಮಾಡಿ ವರದಿ ಸಲ್ಲಿಸಬೇಕು’ ಎಂದು ಬೊಮ್ಮಾಯಿ ತಿಳಿಸಿದರು.

‘ಕಂದಾಯ, ಪೊಲೀಸ್‌, ಅಗ್ನಿಶಾಮಕ ಮತ್ತು ಇತರ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು. ಕರಾವಳಿ ಪ್ರದೇಶದಲ್ಲಿ ಕಡಲ ಕೊರೆತ ಆದಲ್ಲಿ ತುರ್ತು ಕಾಮಗಾರಿ ಕೂಡಲೇ ಕೈಗೊಂಡು ಹೆಚ್ಚಿನ ಹಾನಿಯಾಗದಂತೆ ಮುನ್ನೆಚ್ಚರಿಗೆ ವಹಿಸಬೇಕು. ವಿದ್ಯುತ್‌ ಕಂಬಗಳು ಬಿದ್ದು ಹೋದಲ್ಲಿ ಕೂಡಲೇ ಸರಿಪಡಿಸಿ, ವಿದ್ಯುತ್‌ ಪೂರೈಕೆಯಲ್ಲಿ ಅಡಚಣೆ ಆಗದಂತೆ ನೋಡಿಕೊಳ್ಳಬೇಕು ಎಂದೂ ಸೂಚಿಸಿದರು.

ಹಾನಿಯ ಪ್ರಮಾಣ (ಜೂನ್ 1ರಿಂದ ಈವರೆಗೆ)
ಪ್ರವಾಹ ಪೀಡಿತ ಜಿಲ್ಲೆಗಳು;
13
ತಾಲ್ಲೂಕುಗಳು; 17
ಗ್ರಾಮಗಳು; 37
ಜೀವಹಾನಿ; 12
ಜಾನುವಾರು ಪ್ರಾಣಹಾನಿ; 65
ಬಾಧಿತ ಜನಸಂಖ್ಯೆ; 495
ರಕ್ಷಿಸಲ್ಪಟ್ಟವರು; 90

ರೆಡ್‌ ಅಲರ್ಟ್‌: ಜನರ ತೆರವಿಗೆ ಸೂಚನೆ
ಕಳೆದ ವರ್ಷ ಭೂಕುಸಿತ ಆದ ಪ್ರದೇಶಗಳಲ್ಲಿ ಈಗ ವಾಸವಿರುವ ಜನರನ್ನು ತಕ್ಷಣವೇ ತೆರವುಗೊಳಿಸಬೇಕು. ಮುಂದಿನ ಕೆಲವು ದಿನಗಳಲ್ಲಿ ಈ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

ಉಡುಪಿ, ದ.ಕ ಮತ್ತು ಉತ್ತರಕನ್ನಡ ಜಿಲ್ಲೆಯಲ್ಲಿ ಇದೇ 9 ಮತ್ತು 10 ರಂದು ರೆಡ್‌ ಅಲರ್ಟ್‌, ಇದೇ 11 ರಿಂದ 13 ರವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇದೇ 9 ಮತ್ತು 10 ರಂದು ಆರೆಂಜ್ ಅಲರ್ಟ್‌, ಇದೇ 11 ರಿಂದ 13 ವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ ಎಂದರು.

ಮಳೆಯಿಂದ ಹಾನಿಗೊಳಗಾದ ರಸ್ತೆಗಳ ದುರಸ್ತಿಯನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ರಸ್ತೆಗಳ ಮೇಲೆ ಭೂಕುಸಿತವಾದಲ್ಲಿ ಕೂಡಲೇ ತೆರವುಗೊಳಿಸಬೇಕು ಎಂದು ಬೊಮ್ಮಾಯಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT