ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸೌಧದಲ್ಲಿ ರಾಸಾಯನಿಕಯುಕ್ತ ಅರಿಶಿನ–ಕುಂಕುಮ ನಿಷೇಧ ಹೊಸತೇನಲ್ಲ: ಸಿದ್ದರಾಮಯ್ಯ

Published 19 ಅಕ್ಟೋಬರ್ 2023, 6:49 IST
Last Updated 19 ಅಕ್ಟೋಬರ್ 2023, 6:49 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಆಯುಧ ಪೂಜೆ ವೇಳೆ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸದಂತೆ ಹೊರಡಿಸಿದ್ದ ಸುತ್ತೋಲೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳು ಪಾರಂಪರಿಕ ಕಟ್ಟಡಗಳಾಗಿದ್ದು, ಈ ಕಟ್ಟಡಗಳಲ್ಲಿ ಆಯುಧ ಪೂಜೆ ಮಾಡುವಾಗ ಕುಂಬಳಕಾಯಿ ಮತ್ತು ರಂಗೋಲಿಗಳಲ್ಲಿ ರಾಸಾಯನಿಕ ಮಿಶ್ರಿತವಾದ ಬಣ್ಣ, ಅರಿಶಿನ, ಕುಂಕುಮ ಮತ್ತು ಸುಣ್ಣವನ್ನು ಬಳಸಬಾರದು. ಪಾರಂಪರಿಕ ಕಟ್ಟಡಗಳ ಸೌಂದರ್ಯ ರಕ್ಷಿಸುವುದು ಅಧಿಕಾರಿಗಳು ಮತ್ತು ನೌಕರರ ಕರ್ತವ್ಯ. ಈ ವಿಚಾರದಲ್ಲಿ ಸ್ಪಂದಿಸದೇ ಇದ್ದರೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮತ್ತು ನೌಕರರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸರ್ಕಾರ ಸುತ್ತೋಲೆ ಹೊರಡಿಸಿತ್ತು.

ಸಂಸದ ತೇಜಸ್ವಿ ಸೂರ್ಯ ಟೀಕೆ
ರಾಜ್ಯ ಸರ್ಕಾರದ ಕ್ರಮವನ್ನು ಸಂಸದ ತೇಜಸ್ವಿ ಸೂರ್ಯ ಟೀಕಿಸಿದ್ದರು. ಎರಡು ರಾಜ್ಯ, ಎರಡು ಸರ್ಕಾರ ಆಯುಧ ಪೂಜೆಯನ್ನು ಗುರಿಯಾಗಿಸಿವೆ ಎಂದು ಕಿಡಿಕಾರಿದ್ದರು.

ಇಂಡಿಯಾ ಮೈತ್ರಿಕೂಟದಲ್ಲಿರುವ ಪಕ್ಷಗಳಲ್ಲಿ ನೂರಾರು ಭಿನ್ನಾಭಿಪ್ರಾಯಗಳಿವೆ. ಆದರೆ, ದ್ವೇಷ ಹರಡುವುದು ಮತ್ತು ಈ ನೆಲದ ಸಂಸ್ಕೃತಿಯನ್ನು ಉಲ್ಲಂಘಿಸುವ ವಿಚಾರದಲ್ಲಿ ಒಂದಾಗುತ್ತವೆ. ಸರ್ಕಾರಿ ಕಚೇರಿಗಳಲ್ಲಿ ಆಯುಧ ಪೂಜೆ ಸಂದರ್ಭದಲ್ಲಿ ಹೂ, ಕುಂಕುಮ, ಅರಿಶಿನ ಬಳಸುವುದಕ್ಕೆ ಹಾಗೂ ಪೂಜಾ ಕಾರ್ಯಕ್ರಮ ನೆರವೇರಿಸುವುದನ್ನು ನಿರ್ಬಂಧಿಸಿ ತಮಿಳುನಾಡಿನ ಡಿಎಂಕೆ ಸರ್ಕಾರ ಮತ್ತು ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಸುತ್ತೋಲೆ ಹೊರಡಿಸಿವೆ.  ದಕ್ಷಣ ಭಾರತದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಿಬ್ಬಂದಿ, ಹಲವು ವರ್ಷಗಳಿಂದ ಅತ್ಯಂತ ಉತ್ಸಾಹದಿಂದ ಆಯುಧ ಪೂಜೆ ನಡೆಸುತ್ತಿದ್ದರು. ಇದೀಗ ಈ ಮಹತ್ವದ ಆಚರಣೆಯನ್ನು ಇಂಡಿಯಾ ಮೈತ್ರಿಕೂಟವು ಗುರಿಯಾಗಿಸಿದೆ ಎಂದು ಟೀಕಿಸಿದ್ದರು.

ನಿಷೇಧ ಹೊಸದಲ್ಲ: ಸಿಎಂ
ತೇಜಸ್ವಿ ಸೂರ್ಯ ಟೀಕೆಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, 'ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಹೊಸದೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಆಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ' ಎಂದು ತಿಳಿಸಿದ್ದಾರೆ.

ಹಾಗೆಯೇ, 'ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು' ಎಂದು ಮನವಿ ಮಾಡಿದ್ದಾರೆ.

ಕಳೆದ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನೂ ತಮ್ಮ ಎಕ್ಸ್‌(ಟ್ವಿಟರ್) ಖಾತೆಯಲ್ಲಿ ಅವರು ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT