ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೋದ್ಯಮ ಪಾರ್ಕ್ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ

Last Updated 16 ನವೆಂಬರ್ 2022, 8:32 IST
ಅಕ್ಷರ ಗಾತ್ರ

ಬೆಂಗಳೂರು: ತಂತ್ರಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ, ಅಭಿವೃದ್ಧಿ ಮತ್ತು ಆವಿಷ್ಕಾರಗಳನ್ನು ಪ್ರೋತ್ಸಾಹಿಸಲು ಬೆಂಗಳೂರಿನಲ್ಲಿ ನವೋದ್ಯಮ ಪಾರ್ಕ್ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ಬೆಂಗಳೂರು ಅರಮನೆ ಆವರಣದಲ್ಲಿ ಬುಧವಾರ ಆರಂಭವಾದ ಬೆಂಗಳೂರು ತಂತ್ರಜ್ಞಾನ ಶೃಂಗ (ಬೆಂಗಳೂರು ಟೆಕ್ ಸಮ್ಮಿಟ್) ಉದ್ಘಾಟಿಸಿ ಅವರು ಮಾತನಾಡಿದರು.

ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಆರು ತಿಂಗಳೊಳಗೆ ನವೋದ್ಯಮ ಪಾರ್ಕ್ ಸ್ಥಾಪನೆಗೆ ಚಾಲನೆ ನೀಡಲಾಗುವುದು. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಕೃಷಿ ಸಂಬಂಧಿ ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳ‌ ನವೋದ್ಯಮಗಳಿಗೂ ಈ ಪಾರ್ಕ್ ನಲ್ಲಿ ಸ್ಥಳಾವಕಾಶ ಕಲ್ಪಿಸಲಾಗುವುದು ಎಂದರು.

ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರಿನ ಆಚೆಗೆ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಲಸ‌ಮಾಡುತ್ತಿದೆ. ಇದಕ್ಕಾಗಿಯೇ ಆರು ಹೊಸ ನಗರಗಳ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಬೆಂಗಳೂರು ಸಮೀಪದ ಒಂದು ಸ್ಥಳವನ್ನು ಜ್ಞಾನ ನಗರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಪರಿಸರ ಸ್ನೇಹಿ ಸಂಶೋಧನೆ, ಅಭಿವೃದ್ಧಿ ಮತ್ತು ಆವಿಷ್ಕಾರಗಳಿಗೆ ಹೆಚ್ಷಿನ ಉತ್ತೇಜನ ನೀಡಬೇಕಿದೆ. ಪರಿಸರವನ್ನು ಮುಂದಿನ ಪೀಳಿಗೆಗಾಗಿ ಸಂರಕ್ಷಿಸುವ ಧ್ಯೇಯ ಎಲ್ಲ ಆವಿಷ್ಕಾರಗಳ ಹಿಂದೆ ಇರಬೇಕು ಎಂದು ಬೊಮ್ಮಾಯಿ ಹೇಳಿದರು.

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಫಿನ್ಲೆಂಡ್‌ ವಿಜ್ಞಾನ ಮತ್ತು ಸಂಸ್ಕೃತಿ ಸಚಿವ ಪೆಟ್ರಿ ಹೊಂಕೊನೆನ್, ಅರಬ್ ಸಂಯುಕ್ತ ಸಂಸ್ಥಾನದ ಕೃತಕ ಬುದ್ಧಿಮತ್ತೆ, ಡಿಜಿಟಲ್ ಆರ್ಥಿಕತೆ ಮತ್ತು ರಿಮೋಟ್ ತಂತ್ರಾಂಶ ರಾಜ್ಯ ಸಚಿವ ಒಮರ್ ಬಿನ್ ಸುಲ್ತಾಮ್ ಒಲಮಾ, ಆಸ್ಟ್ರೇಲಿಯಾದ ಸಹಾಯಕ ಸಚಿವ ಟಿಮ್ ವಾಟ್ಸ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ವಿವಿಧ ವಿಷನ್ ಗ್ರೂಪ್ ಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT