ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸುಳ್ಳು ಸುದ್ದಿ ನಿಯಂತ್ರಣ: ಸಚಿವರ ಜತೆ ಸಿಎಂ ಸಭೆ

Published : 30 ಜುಲೈ 2023, 15:53 IST
Last Updated : 30 ಜುಲೈ 2023, 15:53 IST
ಫಾಲೋ ಮಾಡಿ
Comments

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವುದನ್ನು ನಿಯಂತ್ರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಸಚಿವ ಜಿ. ಪರಮೇಶ್ವರ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಜತೆ ಭಾನುವಾರ ಚರ್ಚೆ ನಡೆಸಿದ್ದಾರೆ.

ಉಡುಪಿಯಲ್ಲಿ ನರ್ಸಿಂಗ್‌ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೊ ಚಿತ್ರೀಕರಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಹಾಗೂ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ನಂದಿ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರಲು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

‘ಎರಡೂ ಪ್ರಕರಣಗಳಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸುತ್ತಿದ್ದಾರೆ. ಉಡುಪಿ ಪ್ರಕರಣದಲ್ಲಿ ತಮಿಳುನಾಡಿನ ವಿಡಿಯೊ ತುಣುಕೊಂದನ್ನು ಬಳಸಿಕೊಂಡು ಅಪಪ್ರಚಾರ ನಡೆಸಲಾಗುತ್ತಿದೆ. ಜೈನ ಮುನಿ ಕೊಲೆ ಪ್ರಕರಣದಲ್ಲಿ ಸಿದ್ದರಾಮಯ್ಯ ಕೊಲೆಗಡುಕ ಎಂದು ವಾಟ್ಸ್ ಆ್ಯಪ್‌ ಗುಂಪುಗಳಲ್ಲಿ ಪ್ರಚಾರ ಮಾಡಲಾಗಿದೆ. ಇಂತಹ ಬೆಳವಣಿಗೆಗಳಿಂದ ರಾಜ್ಯಕ್ಕೆ ಹೂಡಿಕೆ ಹರಿದುಬರುವುದು ಕಡಿಮೆಯಾಗಲಿದೆ’ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ ಎಂದು ಗೊತ್ತಾಗಿದೆ.

ಸುಳ್ಳು ಸುದ್ದಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಯವರು ಒಲವು ತೋರಿದ್ದಾರೆ. ಈ ದಿಸೆಯಲ್ಲಿ ಹೇಗೆ ಮುಂದುವರಿಯಬಹುದು ಎಂಬುದನ್ನು ‍ಪರಿಶೀಲಿಸುವಂತೆ ಸಭೆಯಲ್ಲಿದ್ದ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT