ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ನಾಯಕರಿಗೂ ಪಾಲಿದೆಯೇ?: ಸಿದ್ದರಾಮಯ್ಯ

Published 27 ಡಿಸೆಂಬರ್ 2023, 0:30 IST
Last Updated 27 ಡಿಸೆಂಬರ್ 2023, 0:30 IST
ಅಕ್ಷರ ಗಾತ್ರ

ಬೆಂಗಳೂರು: ‘ತನ್ನನ್ನುಚೌಕಿದಾರ ಎಂದು ಬಣ್ಣಿಸಿಕೊಳ್ಳುವ, ನ ಖಾವೂಂಗಾ ನಾ ಖಾನೆ ದೂಂಗಾ ಎಂದು ಗುಟುರು ಹಾಕುವ ಪ್ರಧಾನಿ ನರೇಂದ್ರ ಮೋದಿ ಅವರೂ ತಮ್ಮದೇ ಪಕ್ಷದ ನಾಯಕ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಮೌನವಾಗಿರುವುದು ನಿಗೂಢವಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಸನಗೌಡ ಪಾಟೀಲ ಯತ್ನಾಳ ಆರೋಪದ ಬಗ್ಗೆ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಲ್ಲಿ ಕೇಂದ್ರದ ನಾಯಕರಿಗೂ ಪಾಲು ಹೋಗಿದೆ ಎನ್ನುವ ಆರೋಪಕ್ಕೆ ಎಡೆ ಮಾಡಿಕೊಡುವುದಿಲ್ಲವೇ ಪ್ರಧಾನಿಗಳೇ’ ಎಂದು ಕುಟುಕಿದ್ದಾರೆ.

‘ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು ₹40 ಸಾವಿರ ಕೋಟಿ ಭ್ರಷ್ಟಾಚಾರ ಎಸಗಿದೆ ಎಂದು  ಯತ್ನಾಳ್ ಅವರು ನೇರವಾಗಿ ಆರೋಪಿಸುವ ಮೂಲಕ ಬಿಜೆಪಿ ಸರ್ಕಾರ ಶೇ 40ರ ಕಮಿಷನ್ ಸರ್ಕಾರವಾಗಿತ್ತು ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ’ ಎಂದು ಹೇಳಿದ್ದಾರೆ.

‘ಕೋವಿಡ್‌ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಲ್ಲಿ ಯಡಿಯೂರಪ್ಪ ಸರ್ಕಾರ ₹4,000 ಕೋಟಿ ಅಕ್ರಮ ಮಾಡಿದೆ ಎಂದು ದಾಖಲೆ ಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಆರೋಪ ಗಮನಿಸಿದರೆ ನಮ್ಮ ಅಂದಾಜಿಗಿಂತಲೂ ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ. ನಮ್ಮ ಆರೋಪ ಕೇಳಿ ಹೌಹಾರಿ ಬಂದು ಆಗ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಆಗಿನ ಸಚಿವರ ದಂಡು ಈಗ ಎಲ್ಲಿ ಅಡಗಿ ಕೂತಿದೆ’ ಎಂದು ಸಿದ್ದರಾಮಯ್ಯ ಕೆಣಕಿದ್ದಾರೆ.

 ‘ಯತ್ನಾಳ್ ಅವರು ಹಿಟ್ ಎಂಡ್ ರನ್ ಮಾಡಬಾರದು. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕೆಂಬ ಬದ್ಧತೆಯನ್ನು ಅವರು ಹೊಂದಿದ್ದರೆ ತಮ್ಮ ಆರೋಪವನ್ನು ತಾರ್ಕಿಕ ಅಂತ್ಯದೆಡೆಗೆ ಒಯ್ಯಬೇಕು. ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಇರುವ ಎಲ್ಲ ಮಾಹಿತಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ರಚಿಸಲಾಗಿರುವ ತನಿಖಾ ಆಯೋಗಕ್ಕೆ ಒಪ್ಪಿಸಬೇಕು’ ಎಂದೂ ಅವರು ಹೇಳಿದ್ದಾರೆ.

ಯತ್ನಾಳ್ ಅವರು ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಬಿ.ವೈ ವಿಜಯೇಂದ್ರ ಹಾಗೂ ಹಿಂದಿನ ಸರ್ಕಾರದ ಸಂಪುಟದಲ್ಲಿದ್ದ ಕೆಲವು ಸಚಿವರ ವಿರುದ್ಧ ನಿರಂತರವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಾ ಬಂದಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜ್ಯದ ಬಿಜೆಪಿ ನಾಯಕರು ಈ ಬಗ್ಗೆ ಮೌನವಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ ಎಂದೂ ಅವರು ಕುಟುಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT