ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ- ಬಿ.ಕೆ.ಹರಿಪ್ರಸಾದ್ ನಡುವಿನ ಭಿನ್ನಾಭಿಪ್ರಾಯ ಹೈಕಮಾಂಡ್‌ ಅಂಗಳಕ್ಕೆ

Published 11 ಸೆಪ್ಟೆಂಬರ್ 2023, 16:02 IST
Last Updated 11 ಸೆಪ್ಟೆಂಬರ್ 2023, 16:02 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್ ನಡುವಿನ ಭಿನ್ನಾಭಿಪ್ರಾಯವು ಇದೀಗ ಕಾಂಗ್ರೆಸ್‌ ಹೈಕಮಾಂಡ್ ಅನ್ನು ತಲುಪಿದೆ. ಹರಿಪ್ರಸಾದ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಅವರು ವರಿಷ್ಠರಿಗೆ ಮನವಿ ಮಾಡಿದ್ದಾರೆ. 

ಹರಿಪ್ರಸಾದ್ ಶನಿವಾರ ನೀಡಿರುವ ಹೇಳಿಕೆ ಕುರಿತು ಮುಖ್ಯಮಂತ್ರಿಯವರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೆವಾಲಾ ಹಾಗೂ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ದೂರವಾಣಿ ಕರೆಮಾಡಿ ಮಾತನಾಡಿದ್ದಾರೆ. ಹರಿಪ್ರಸಾದ್ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಭವಿಷ್ಯದಲ್ಲಿ ಅವರು ಇಂತಹ ಹೇಳಿಕೆ ನೀಡದಿರುವಂತೆ ಎಚ್ಚರಿಕೆ ನೀಡಬೇಕು ಎಂದು ಕೋರಿದ್ದಾರೆ. ಇಂತಹ ಹೇಳಿಕೆಗಳಿಂದ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂಬುದಾಗಿಯೂ ಅವರು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದೆಡೆ, ಶನಿವಾರ ನಡೆದ ಹಿಂದುಳಿದ ವರ್ಗಗಳ ಸಮಾವೇಶ ಹಾಗೂ ಹರಿಪ್ರಸಾದ್‌ ಹೇಳಿಕೆಯ ವಿವರಗಳನ್ನು ಸುರ್ಜೆವಾಲಾ ಅವರು ರಾಜ್ಯ ಕಾಂಗ್ರೆಸ್‌ ನಾಯಕರಿಂದ ಪಡೆದಿದ್ದಾರೆ. ಯಾವುದೇ ಹೇಳಿಕೆ ನೀಡದಂತೆ ಹರಿಪ್ರಸಾದ್‌ ಅವರಿಗೆ ವರಿಷ್ಠರು ಮೌಖಿಕ ಸೂಚನೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ. ‘ಮುಖ್ಯಮಂತ್ರಿಯವರು ಹೈಕಮಾಂಡ್‌ಗೆ ಯಾವುದೇ ಲಿಖಿತ ದೂರು ನೀಡಿಲ್ಲ’ ಎಂದು ಸಿದ್ದರಾಮಯ್ಯ ಅವರ ಆಪ್ತಮೂಲಗಳು ಸ್ಪಷ್ಟಪಡಿಸಿವೆ. 

ಹರಿಪ್ರಸಾದ್ ಅವರು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಗೆ ಕಾಯಂ ಆಹ್ವಾನಿತರಾಗಿ ಇತ್ತೀಚೆಗೆ ನಾಮನಿರ್ದೇಶನಗೊಂಡಿದ್ದಾರೆ. ಜತೆಗೆ, ಹೈಕಮಾಂಡ್‌ನ ನಾಯಕರ ಜತೆಗೆ ಉತ್ತಮ ನಂಟು ಹೊಂದಿದ್ದಾರೆ. ಹೀಗಾಗಿ, ಅವರ ವಿರುದ್ಧ ಹೈಕಮಾಂಡ್‌ ಶಿಸ್ತುಕ್ರಮ ಕೈಗೊಳ್ಳುವ ಸಾಧ್ಯತೆ ಕಡಿಮೆ ಎಂದು ಮೂಲಗಳು ಹೇಳಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT