ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಧನೂರು | ನವಲಿ ಸಮತೋಲನ ಜಲಾಶಯ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Published 31 ಡಿಸೆಂಬರ್ 2023, 8:17 IST
Last Updated 31 ಡಿಸೆಂಬರ್ 2023, 8:17 IST
ಅಕ್ಷರ ಗಾತ್ರ

ಸಿಂಧನೂರು (ರಾಯಚೂರು ಜಿಲ್ಲೆ): ‘ತುಂಗಭದ್ರಾ ನದಿಗೆ ನವಲಿ ಬಳಿ ಸಮತೋಲನ ಜಲಾಶಯ ನಿರ್ಮಾಣ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಸಿಂಧನೂರ ತಾಲ್ಲೂಕಿನ ವ್ಯಾಪ್ತಿಯ 24 ಹಳ್ಳಿಗಳ 35 ಸಾವಿರ ಎಕರೆಯ ಪ್ರದೇಶಕ್ಕೆ ನೀರುಣಿಸುವ ₹109 ಕೋಟಿ ವೆಚ್ಚದ ಮಹತ್ವದ ತಿಮ್ಮಾಪುರ ಏತ ನೀರಾವರಿ ಯೋಜನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಿದ್ಯುಕ್ತವಾಗಿ ಚಾಲನೆ ನೀಡಿ ಅವರು ಮಾತನಾಡಿದರು.

‘ತುಂಗಭದ್ರಾ ಅಣೆಕಟ್ಟಿನಲ್ಲಿ 32 ಟಿಎಂಸಿ ಹೂಳು ತುಂಬಿಕೊಂಡಿದೆ. ಈ ನೀರು ಆಂಧ್ರಪ್ರದೇಶಕ್ಕೆ ಹೊರಟಿದೆ. ನವಲೆ ಸಮತೋಲನ ಅಣೆಕಟ್ಟು ನಿರ್ಮಾಣ ಮಾಡುವಂತೆ ರೈತರು ಒತ್ತಾಯಿಸಿದ್ದಾರೆ. ಸರ್ಕಾರದಿಂದ ನವಲಿ ಜಲಾಶಯ ನಿರ್ಮಾಣ ಮಾಡಿ ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು’ ಎಂದು ತಿಳಿಸಿದರು.

‘ತಿಮ್ಮಾಪುರ ಏತ ನೀರಾವರಿ ಯೋಜನೆ ತುಂಗಭದ್ರಾ ಎಡದಂಡೆ ಕಾಲುವೆಯ 27 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ನೀರು ಸಿಗುತ್ತಿರಲಿಲ್ಲ. ರೈತರು ಶಾಸಕರ ಮೇಲೆ ಒತ್ತಡ ಹಾಕುತ್ತಿದ್ದರು. 2019ರಲ್ಲಿ ಸಮ್ಮಿಶ್ರ ಸರ್ಕಾರ ಇದ್ದಾಗ ಡಿ.ಕೆ.ಶಿವಕುಮಾರ ನೀರಾವರಿ ಸಚಿವರಾಗಿದ್ದರು’ ಎಂದು ತಿಳಿಸಿದರು.

‘1.8 ಟಿಎಂಸಿ ನೀರನ್ನು 27 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ಕೊಡಲಾಗುತ್ತಿದೆ. ಶೇಕಡ 90ರಷ್ಟು ಬಡವರು, ಪರಿಶಿಷ್ಟರು ಹಾಗೂ ಹಿಂದುಳಿದವರು ಇರುವ ಪ್ರದೇಶವಾಗಿದೆ. ಭತ್ತ ಬೆಳೆಯಲು ಅನುಕೂಲ ಮಾಡಿಕೊಡಲಾಗಿದೆ. ಸಿಂಧನೂರು ತಾಲ್ಲೂಕಿನ ಶೇಕಡ 80ರಷ್ಟು ಭೂಮಿಗೆ ನೀರಾವರಿ ಸೌಲಭ್ಯ ದೊರಕುತ್ತಿದೆ. ಶಾಸಕರು ನೂರಕ್ಕೆ ನೂರರಷ್ಟು ಭೂಮಿ ನೀರಾವರಿಯಾಗಬೇಕು ಎನ್ನುವ ಬೇಡಿಕೆ ಇದೆ. ಕಾಂಗ್ರೆಸ್‌ ಸರ್ಕಾರ ಈ ಕಾರ್ಯವನ್ನೂ ಮಾಡಲಿದೆ’ ಎಂದು ಅಭಯ ನೀಡಿದರು.

‘ರೈತರ ಜೀವನ ಮಟ್ಟವನ್ನು ಮೇಲ್ದರ್ಜೆಗೇರಿಸುವುದು ಸರ್ಕಾರದ ಉದ್ದೇಶವಾಗಿದೆ. ಪ್ರತಿಯೊಬ್ಬ ಶಾಸಕರು ತಮ್ಮ ತಮ್ಮ ಕ್ಷೇತ್ರದ ಅಭಿವೃದ್ಧಿ ಮಾಡಿದರೆ ಹೈದರಾಬಾದ್‌ ಕರ್ನಾಟಕ ಹಾಗೂ ರಾಜ್ಯ ಅಭಿವೃದ್ಧಿಯಾಗಲು ಸಾಧ್ಯವಾಗಲಿದೆ’ ಎಂದು ತಿಳಿಸಿದರು.

ಕರ್ನಾಟಕ ಸುವರ್ಣ ಸಂಭ್ರಮ: ಸರ್ಕಾರಿ ಪದವಿ ಮಹಾವಿದ್ಯಾಲಯ 50ನೇ ವರ್ಷಕ್ಕೆ ಪದಾರ್ಪಣೆ ಮಾಡಿದೆ. ಕರ್ನಾಟಕ ಎಂದು ನಾಮಕರಣ ಆಗಿ 50 ವರ್ಷ ತುಂಬಿದೆ. ಸುವರ್ಣ ಮಹೋತ್ಸವವನ್ನು ಬಿಜೆಪಿ ಸರ್ಕಾರ ಮಾಡಲಿಲ್ಲ. ಆದರೆ, ಕಾಂಗ್ರೆಸ್‌ ಸರ್ಕಾರ ಸುವರ್ಣ ಮಹೋತ್ಸವ ಆಚರಿಸುತ್ತಿದೆ. ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮಾಡಿದೆ ಎಂದು ಸಿದ್ದರಾಮಯ್ಯ ಹೇಳಿದರು.

‘ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಜಾರಿ ಆಗಿವೆ. ಯುವ ನಿಧಿ ಯೋಜನೆಗೆ ಜನವರಿ 12ರಂದು ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುವುದು. ಪ್ರಧಾನಿ ಸೇರಿ ಬಹಳಷ್ಟು ಜನ ಅವರು ಐದು ಗ್ಯಾರಂಟಿ ಮಾಡಲು ಸಾಧ್ಯವಿಲ್ಲ. ಮಾಡಿದರೆ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಲಿದೆ ಎಂದು ಟೀಕಿಸಿದ್ದರು. ಇಂದು ರಾಜ್ಯ ಸರ್ಕಾರ ಸುಬಧ್ರವಾಗಿದೆ. ಬಿಜೆಪಿಗೆ ಈಗ ನುಂಗಲಾರದ ತುತ್ತು ಆಗಿದೆ’ ಎಂದು ತಿರುಗೇಟು ನೀಡಿದರು.

‘ರಾಜ್ಯದಲ್ಲಿ 1.20 ಕೋಟಿ ಹೆಣ್ಣುಮಕ್ಕಳು ಉಚಿತ ಪ್ರಯಾಣ ಮಾಡಿದ್ದಾರೆ. 1.16 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆ ಅಡಿ ಆರ್ಥಿಕ ನೆರವು ಕೊಡಲಾಗುತ್ತಿದೆ. ರಾಜ್ಯದ 4.30 ಕೋಟಿ ಬಡವರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಪ್ರತಿ ಕುಟುಂಬದವರಿಗೆ ₹ 4 ಸಾವಿರದಿಂದ ₹ 5 ಸಾವಿರ ದೊರಕುತ್ತಿದೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿ 136 ತಾಲ್ಲೂಕುಗಳಲ್ಲಿ ಬರಗಾಲ ಇದೆ. ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅನುಕೂಲವಾಗಿದೆ. ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ಬಂದಿರುವೆ. ಈವರೆಗೂ ಒಂದು ಪೈಸೆ ಕೊಟ್ಟಿಲ್ಲ. ರಾಜ್ಯದಿಂದ ₹4 ಲಕ್ಷ ಕೋಟಿಗೂ ಹೆಚ್ಚು ತೆರಿಗೆ ಕೊಟ್ಟಿದ್ದೇವೆ. ನಮ್ಮ ರಾಜ್ಯಕ್ಕೆ ₹56 ಸಾವಿರ ಕೋಟಿ ಮರಳಿ ಬರಬೇಕಿದೆ. ಬಿಜೆಪಿ ಸಂಸದರು ಏನೂ ಕೇಳುತ್ತಿಲ್ಲ’ ಎಂದು ದೂರಿದರು.

‘ಹಿಂದಿನ ಸರ್ಕಾರದವರು ತಿಂದು ಹೊರಟು ಹೋಗಿದ್ದಾರೆ. ನೀರಾವರಿ ಯೋಜನೆಯಲ್ಲಿ ₹13 ಸಾವಿರ ಕೋಟಿ, ಲೋಕೋಪಯೋಗಿ ಇಲಾಖೆಯಲ್ಲಿ ₹9 ಸಾವಿರ ಕೋಟಿ, ಸಣ್ಣ ನೀರಾವರಿಯಲ್ಲಿ ₹4 ಸಾವಿರ ಕೋಟಿ ಬಾಕಿ ಉಳಿಸಿ ಹೋಗಿದ್ದಾರೆ. ಸರ್ಕಾರವನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದ್ದಾರೆ. ಆದರೆ, ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ. ಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಆಶೀರ್ವಾದ ಮಾಡಬೇಕು’ ಎಂದು ಮನವಿ ಮಾಡಿದರು.

ಸಿಂಧನೂರು ಮಾದರಿ ತಾಲ್ಲೂಕು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮಾತನಾಡಿ, ‘ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿ 30 ಟಿಎಂಸಿ ನೀರು ಪೋಲಾಗುತ್ತಿದೆ. ಇದಕ್ಕೆ ಪರಿಹಾರ ಕಂಡುಹಿಡಿಯಲು ನವಲಿಯಲ್ಲಿ ಸಮತೋಲನ ಅಣೆಕಟ್ಟು ನಿರ್ಮಾಣಕ್ಕೆ ಯೋಜನೆ ಮಾಡಲಾಗಿದೆ. ಆಂಧ್ರಪ್ರದೇಶ ಹಾಗೂ ತೆಲಂಗಾಣಕ್ಕೂ ಅನುಕೂಲವಾಗಲಿದೆ. ಇದಕ್ಕೆ ತಯಾರಿ ಮಾಡಿಕೊಂಡು ಕಾರ್ಯಕ್ರಮ ರೂಪಿಸಿದ್ದೇವೆ’ ಎಂದು ಹೇಳಿದರು.

‘ಸಿಂಧನೂರು ತಾಲ್ಲೂಕು ಜಿಲ್ಲೆಗೆ ಮಾದರಿಯಾಗಿದೆ. ರಾಜ್ಯದ ಜನ ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚಿನ ಸ್ಥಾನ ಕಲ್ಪಿಸಿ ಅಧಿಕಾರಕ್ಕೆ ಬರುವಂತೆ ಮಾಡಿದ್ದಾರೆ. ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವೆ. ಎಲ್ಲ ವರ್ಗದವರಿಗೂ ಅನುಕೂಲ ಮಾಡಿಕೊಡಲಾಗಿದೆ. ಪ್ರಣಾಳಿಕೆಯಲ್ಲಿ ಮಾತುಕೊಟ್ಟಂತೆ ನಡೆದಿದ್ದೇವೆ’ ಎಂದರು.

‘ಚುನಾವಣೆ ಪೂರ್ವದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ ನಡೆದುಕೊಂಡಿಲ್ಲ. ಕಾಂಗ್ರೆಸ್‌ ಸರ್ಕಾರ ಈಗ ಯುವನಿಧಿ ಯೋಜನೆಗೂ ಚಾಲನೆ ನೀಡಿದೆ. ಒಂದು ಕೋಟಿ ಹೆಣ್ಣು ಮಕ್ಕಳಿಗೆ ಎರಡು ಸಾವಿರ ರೂಪಾಯಿ ಕೊಡುತ್ತಿದ್ದೇವೆ. 10 ಕೆ.ಜಿ ಕೊಡುತ್ತಿದ್ದೇವೆ. ಎಲ್ಲರ ಮನೆ ಬೆಳಗಲು ಗೃಹ ಜೋತಿ ಒದಗಿಸಿದ್ದೇವೆ. ಕಾಂಗ್ರೆಸ್‌ ಗ್ಯಾರಂಟಿಗೆ ಅರಳಿದ ಕಮಲ ಮುದಡಿತು. ತೆನೆ ಬಾಡಿತು’ ಎಂದು ಹೇಳಿದರು.

‘₹50 ಸಾವಿರ ಕೋಟಿ ಖರ್ಚಾಗುತ್ತಿದ್ದರೂ ಜನರಿಗಾಗಿ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲಾಗಿದೆ’ ಎಂದು ತಿಳಿಸಿದರು.

ಶಾಸಕ ಹಂಪನಗೌಡ ಬಾದರ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ, ‘2017–2018ರಲ್ಲಿ ಸಿದ್ದರಾಮಯ್ಯ ಅವರೇ ಶಂಕುಸ್ಥಾಪನೆ ನೆರವೇರಿಸಿದ್ದರು. ಇದರಿಂದ 24 ಹಳ್ಳಿಗಳ 27 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ಅನುಕೂಲವಾಗಲಿದೆ. ಕಲಬುರಗಿ ವಿಭಾಗದ ದೊಡ್ಡ ಯೋಜನೆಯಾಗಿದೆ’ ಎಂದು ತಿಳಿಸಿದರು.

‘₹2,600 ಕೋಟಿ ಅನುದಾನದಲ್ಲಿ 1,444 ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆಗೂ ಚಾಲನೆ ನೀಡಲಾಗಿದೆ’ ಎಂದು ಹೇಳಿದರು.

‘ನವಲಿ ಜಲಾಶಯಕ್ಕೆ ಬಜೆಟ್‌ನಲ್ಲಿ ₹500 ಕೋಟಿ ನಿಗದಿ ಮಾಡಬೇಕು. ಕಾಮಗಾರಿಗೂ ಚಾಲನೆ ನೀಡಬೇಕು. ಈ ಭಾಗದ ಜನರ ನೀರಿನ ಸಮಸ್ಯೆ ನೀಗಿಸಬೇಕು’ ಎಂದು ಮನವಿ ಮಾಡಿದರು.

‘ಕೆಕೆಆರ್‌ಡಿಬಿಯಿಂದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೂ ಅನುದಾನ ಕೊಡಬೇಕು. ರೈಲ್ವೆ ಯೋಜನೆ ವಿಸ್ತರಣೆಗೂ ನೆರವಾಗಬೇಕು. ರಾಯಚೂರು ದೊಡ್ಡ ಜಿಲ್ಲೆಯಾಗಿದೆ. ಅದನ್ನು ವಿಭಜಿಸಿ ಸಿಂಧನೂರು ಜಿಲ್ಲೆ ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಎಂ.ವೀರಣ್ಣ ತಂಡದವರು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗೆ ಬೆಳ್ಳಿಗಧೆ ನೀಡಿ ಸನ್ಮಾನಿಸಿದರು. ಸಂವಿಧಾನ ಪೀಠಿಕೆಯನ್ನು ಮುಖ್ಯಮಂತ್ರಿ ಅವರು ಓದಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಎನ್.ಎಸ್.ಬೋಸರಾಜು, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್‌, ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ, ಸಿರಗುಪ್ಪ ಶಾಸಕ ಬಿ.ಎಂ.ನಾಗರಾಜ, ಮಾನ್ವಿ ಶಾಸಕ ಅಂಬಯ್ಯ ನಾಯಕ, ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಉಪಸ್ಥಿತರಿದ್ದರು.

ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ., ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ಪಾಂಡ್ವೆ, ರಾಯಚೂರು ಉಪ ವಿಭಾಗಾಧಿಕಾರಿ ಮೆಹಬೂಬಿ, ಲಿಂಗಸುಗೂರು ಉಪ ವಿಭಾಧಿಕಾರಿ ಅವಿನಾಶ ಶಿಂದೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಸಿಂಧನೂರಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು
ಸಿಂಧನೂರಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು
ಸಿಂಧನೂರಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನ
ಸಿಂಧನೂರಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT