ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇದೇ 17 ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.
ಕಲಬುರಗಿ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸಂಜೆ 4 ಕ್ಕೆ ಸಂಪುಟ ಸಭೆ ನಡೆಯಲಿದೆ. ಇತ್ತೀಚಿನ ವರ್ಷಗಳಲ್ಲಿ ಸಿದ್ದರಾಮಯ್ಯ ಅಲ್ಲದೇ, ಬಿ.ಎಸ್.ಯಡಿಯೂರಪ್ಪ, ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿ ಆಗಿದ್ದಾಗ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆಗಳನ್ನು ನಡೆಸಿದ್ದರು.
ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ವಿಷಯಗಳಿಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ.
ಅದೇ ದಿನ (ಸೆ.17) ಹೈದರಾಬಾದ್ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಬೆಳಿಗ್ಗೆ ನಡೆಯುವ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲೂ ಮುಖ್ಯಮಂತ್ರಿ ಪಾಲ್ಗೊಳ್ಳಲಿದ್ದಾರೆ.