ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೂರದ ಊರಲ್ಲಿ ಕುಳಿತು ಗಾಳಿಯಲ್ಲಿ ಗುಂಡು ಬೇಡ,ನೇರ ಚರ್ಚೆಗೆ ಬನ್ನಿ; ಪಿಎಂಗೆ ಸಿಎಂ

Published : 25 ಸೆಪ್ಟೆಂಬರ್ 2024, 17:54 IST
Last Updated : 25 ಸೆಪ್ಟೆಂಬರ್ 2024, 17:54 IST
ಫಾಲೋ ಮಾಡಿ
Comments

ಬೆಂಗಳೂರು: 'ಭ್ರಷ್ಟಾಚಾರ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನಿಸುತ್ತೇವೆ' ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಣಕಿದ್ದಾರೆ.

'ನಮ್ಮ ಸರ್ಕಾರದ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡುತ್ತಿರುವ ಮೋದಿಯವರೇ, ದೂರದ ಊರಲ್ಲಿ ಕುಳಿತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ' ಎಂದು ಸವಾಲು ಹಾಕಿದ್ದಾರೆ.

'ಗಣಿಗಾರಿಕೆಗೆ ಕಾನೂನುಬಾಹಿರವಾಗಿ ಭೂಮಿ ಮಂಜೂರು ಮಾಡಿರುವ, ನೂರಾರು ಕೋಟಿ ರೂಪಾಯಿ ಹಗರಣದ ಆರೋಪ ಎದುರಿಸುತ್ತಿರುವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿರುವ ನಿಮಗೆ ಇತರರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವಾಗ ಆತ್ಮಸಾಕ್ಷಿಯೂ ಚುಚ್ಚುವುದಿಲ್ಲವೇ? ಈ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಕರ್ನಾಟಕದ ಲೋಕಾಯುಕ್ತರು ಕೋರಿರುವ ಅನುಮತಿ ಬಗ್ಗೆ ರಾಜ್ಯಪಾಲರು ಕಣ್ಣು ಮುಚ್ಚಿಕೊಂಡಿರುವುದೇಕೇ? ಅವರ ಮೇಲೆ ಒತ್ತಡ ಹೇರುತ್ತಿರುವರು ಯಾರು?' ಎಂದೂ ಪ್ರಶ್ನಿಸಿದ್ದಾರೆ.

'ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡೂವರೆ ಸಾವಿರ ಕೋಟಿ ರೂಪಾಯಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ' ಎಂದು ಪ್ರಶ್ನಿಸಿದ್ದಾರೆ.

'ತಮ್ಮ ಪಕ್ಷದ ಮುಖ್ಯಮಂತ್ರಿ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದ್ದರೂ ಅವರ ಮೇಲೆ ಕ್ರಮ ಇಲ್ಲ. ದಿನ ಬೆಳಗಾದರೆ ಭ್ರಷ್ಟಾಚಾರದ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ಧವೂ ಯಾವ ಕ್ರಮವೂ ಇಲ್ಲ. ಮೋದಿಯವರೇ ಈ ಮೌನಕ್ಕೆ, ಈ ನಿಷ್ಕ್ರೀಯತೆಗೆ ಏನು ಕಾರಣ? ಈ ಭ್ರಷ್ಟಾಚಾರದಲ್ಲಿ ನೀವೂ ಭಾಗಿದಾರರೆಂದು ತಿಳಿದುಕೊಳ‍್ಳಬಹುದೇ' ಎಂದೂ ಕೇಳಿದ್ದಾರೆ.

'ಪ್ರಧಾನಿ ನರೇಂದ್ರ ಮೋದಿಯವರೇ, ಕಳೆದ ಹನ್ನೊಂದು ವರ್ಷಗಳಲ್ಲಿ ನಿರಂತರವಾಗಿ ನಿಮ್ಮ ಕಾರ್ಯಾಲಯದ ವಾಷಿಂಗ್ ಮೆಷಿನ್ ಕೆಲಸ ಮಾಡುತ್ತಿರುವುದನ್ನು ದೇಶ ಗಮನಿಸುತ್ತಿದೆ. ನಿಮ್ಮಿಂದಲೇ ಭ್ರಷ್ಟಾಚಾರದ ಆರೋಪಕ್ಕೊಳಗಾಗಿರುವ ವಿರೋಧ ಪಕ್ಷಗಳ ನಾಯಕರನ್ನೆಲ್ಲಾ ವಾಷಿಂಗ್ ಮೆಷಿನ್ ನಲ್ಲಿ ಹಾಕಿ ಪರಮ ಪ್ರಾಮಾಣಿಕರನ್ನಾಗಿ ಮಾಡುತ್ತಿರುವ ನಿಮ್ಮ ಚಾಕಚಕ್ಯತೆಗೆ ಶಹಬ್ಬಾಸ್ ಅನ್ನಲೇ ಬೇಕು. ಅಧಿಕೃತ ಮಾಹಿತಿಯ ಪ್ರಕಾರವೇ 2014ರಿಂದ ಇಲ್ಲಿಯ ವರೆಗೆ ಭ್ರಷ್ಟಾಚಾರದ ಆರೋಪ ಹೊತ್ತಿರುವ 25 ವಿರೋಧ ಪಕ್ಷದ ನಾಯಕರು ಬಿಜೆಪಿ ಸೇರಿದ್ದಾರೆ. ಇವರಲ್ಲಿ 23 ನಾಯಕರನ್ನು ಭ್ರಷ್ಟಾಚಾರದ ಆರೋಪಗಳಿಂದ ಕೇಂದ್ರ ತನಿಖಾ ಸಂಸ್ಥೆಗಳು ಮುಕ್ತಗೊಳಿಸಿವೆ'

'ಹಿಮಂತಾ ಶರ್ಮಾ, ಸುವೇಂದು ಅಧಿಕಾರಿ, ಎಚ್.ಡಿ. ಕುಮಾರಸ್ವಾಮಿ, ಅಜಿತ್ ಪವಾರ್, ಅಶೋಕ್ ಚವ್ಹಾಣ್, ನಾರಾಯಣ ರಾಣೆ, ಪ್ರತಾಪ್ ಸರ್‌ನಾಯಕ್ ಅವರಿಂದ ಹಿಡಿದು ಇತ್ತೀಚಿನ ಏಡ್ಸ್ ಟ್ರ್ಯಾಪ್ ಗಿರಾಕಿ ಮುನಿರತ್ನವರೆಗೆ ಎಷ್ಟೊಂದು ಭ್ರಷ್ಟರನ್ನು ವಾಷಿಂಗ್ ಮೆಷಿನ್ ನಲ್ಲಿ ತೊಳೆದು ನೀವು ಕ್ಲೀನ್ ಮಾಡಿಲ್ಲ? ಭ್ರಷ್ಟಾಚಾರದ ಬಗ್ಗೆ ನೀವು ಚರ್ಚೆ ಆರಂಭಿಸಿರುವುದನ್ನು ನೋಡಿ ಸಂತೋಷವಾಯಿತು. ನನ್ನ ವಿರುದ್ಧ ಭ‍್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿ ಕುಣಿದಾಡುತ್ತಿರುವ ಪಾತ್ರದಾರಿಗಳನ್ನಷ್ಟೇ ರಾಜ್ಯದ ಜನ ನೋಡಿದ್ದಾರೆ. ಈಗ ಇದರ ಹಿಂದಿರುವ ಸೂತ್ರಧಾರಿ ಯಾರು ಎನ್ನುವುದು ಕೂಡಾ ಜನರಿಗೆ ಗೊತ್ತಾಗಲಿ' ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT