ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಧಾರ ನೀಡಿ ಸಾಬೀತುಪಡಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

Published 24 ಏಪ್ರಿಲ್ 2024, 20:48 IST
Last Updated 24 ಏಪ್ರಿಲ್ 2024, 20:48 IST
ಅಕ್ಷರ ಗಾತ್ರ

ಬೆಂಗಳೂರು: ‘ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ ಅಲ್ಲ, ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ ಸೂಚಿಸುತ್ತದೆ. ಇಲ್ಲಿಯವರೆಗಿನ ಯಾರೂ ಪ್ರಧಾನಿ ಪಟ್ಟವನ್ನು ಇಂತಹ ಕೀಳುಮಟ್ಟಕ್ಕೆ ಇಳಿಸಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

‘ಜವಾಬ್ದಾರಿ ಸ್ಥಾನದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಂದೊ ಈ ಬೇಜವಾಬ್ದಾರಿತನದ ಆರೋಪವನ್ನು ಆಧಾರಗಳನ್ನು ನೀಡಿ ಸಾಬೀತುಪಡಿಸಬೇಕು. ಇಲ್ಲದೆ ಇದ್ದರೆ ದೇಶದ ಜನರ ಕ್ಷಮೆ ಕೇಳಬೇಕು’ ಎಂದು ಪತ್ರಿಕಾ ಹೇಳೀಕೆಯಲ್ಲಿ ಅವರು ಆಗ್ರಹಿಸಿದ್ದಾರೆ.

‘ಹಿಂದುಳಿದ ಜಾತಿ ಮತ್ತು ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ. ಯಾವ ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿದೆ. ಅದಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶದ ಪತ್ರ ಇದೆಯೇ’ ಎಂದು ಪ್ರಶ್ನಿಸಿರುವ ಮುಖ್ಯ ಮಂತ್ರಿ, ಈ ಎಲ್ಲ ವಿವರವನ್ನು ಪ್ರಧಾನಿಯವರು ದೇಶದ ಮುಂದಿಡಬೇಕು ಎಂದಿದ್ದಾರೆ.

‘ಸಂವಿಧಾನದತ್ತವಾದ ಮೀಸಲಾತಿಯನ್ನು ಮನಬಂದಂತೆ ಬದಲಿಸಲು ಸಾಧ್ಯವಿಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿಯನ್ನು ಪರಿಷ್ಕರಿಸುವ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿ ಇಲ್ಲ. ಅದಕ್ಕಾಗಿ ಸಂಸತ್‌ನ ಉಭಯ ಸದನಗಳ ಒಪ್ಪಿಗೆಯೊಂದಿಗೆ ಸಂವಿಧಾನ ತಿದ್ದುಪಡಿ ಮಾಡಬೇಕಾ ಗುತ್ತದೆ. ಇಂತಹದ್ದೊಂದು ಕನಿಷ್ಠ ಜ್ಞಾನ ಒಬ್ಬ ಪ್ರಧಾನಿಗೆ ಇಲ್ಲದಿರುವುದು ದುರಂತವೇ ಸರಿ’ ಎಂದು ಕುಟುಕಿದ್ದಾರೆ.

‘ಮುಸ್ಲಿಂ ಮೀಸಲಾತಿ ವಿರೋಧಿ ಸುತ್ತಿರುವ ಮೋದಿಯವರ ಹೇಳಿಕೆ ಬಗ್ಗೆ ಎಚ್.ಡಿ. ದೇವೇಗೌಡರ ಪ್ರತಿಕ್ರಿಯೆ ಏನು ಎನ್ನುವುದನ್ನು ತಿಳಿದುಕೊಳ್ಳಲು ಬಯಸುತ್ತೇನೆ’ ಎಂದಿದ್ದಾರೆ.

‘10 ವರ್ಷ ಆಡಳಿತ ನಡೆಸಿದರೂ ತಮ್ಮ ಸಾಧನೆಯ ಬಗ್ಗೆ ಹೇಳಲು ಏನೂ ಇಲ್ಲದಿರುವುದು ಮೋದಿ ಅವರು ಒಬ್ಬ ವಿಫಲ ಪ್ರಧಾನಿ ಎನ್ನುವುದನ್ನು ಸಾಬೀತುಪಡಿಸಿದೆ. ಒಬ್ಬ ಅನಕ್ಷರಸ್ಥ ಮಾತ್ರ ಈ ರೀತಿಯ ಆಧಾರರಹಿತ ಆರೋಪಗಳನ್ನು ಮಾಡಲು ಸಾಧ್ಯ. ಪ್ರಧಾನಿಯವರು ಸ್ವಯಂ ಪ್ರದರ್ಶಿಸುತ್ತಿರುವ ಅಜ್ಞಾನವನ್ನು ನೋಡಿದರೆ ಅವರ ಪದವಿ ಶಿಕ್ಷಣದ ಬಗೆಗಿನ ಸಂಶಯಗಳು ನಿಜ ಇರುವಂತೆ ಕಾಣಿಸುತ್ತದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT