ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ: ಬಿಜೆಪಿ ಆರೋಪ

Published 6 ಜೂನ್ 2024, 16:01 IST
Last Updated 6 ಜೂನ್ 2024, 16:01 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹187 ಕೋಟಿ ಹಣ ವರ್ಗಾವಣೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರವಾಗಿ ಶಾಮೀಲಾಗಿರುವುದರಿಂದ ಅವರಿಂದ ರಾಜೀನಾಮೆ ಪಡೆಯಬೇಕು’ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಬಿಜೆಪಿ ಮನವಿ ಮಾಡಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಅವರ ನೇತೃತ್ವದ ನಿಯೋಗ ಗುರುವಾರ ವಿಧಾನಸೌಧದಿಂದ ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಮನವಿಯನ್ನು ಅರ್ಪಿಸಿತು.

ಆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ, ಈ ಹಗರಣದಲ್ಲಿ ಸಚಿವ ನಾಗೇಂದ್ರ ಮಾತ್ರವಲ್ಲ, ಸಿದ್ದರಾಮಯ್ಯ ಅವರು ಶಾಮೀಲಾಗಿರುವುದರಿಂದ ಅವರು ಕೂಡ ರಾಜೀನಾಮೆ ನೀಡಬೇಕು ಆಗ್ರಹಿಸಿದರು.

‘ಬಡವರಿಗೆ ಸೇರಬೇಕಾಗಿದ್ದ ಹಣ ಸಿದ್ದರಾಮಯ್ಯ ಜೇಬಿಗೆ ಹೋಗಿದೆ. ಪರಿಶಿಷ್ಟ ಜಾತಿ, ಪಂಗಡದ ಹಣವನ್ನೂ ನುಂಗುತ್ತಾರೆ ಎನ್ನುವುದು ರಾಜ್ಯ ರಾಜಕೀಯದ ದುರಂತ. 14 ಬಾರಿ ಬಜೆಟ್ ಮಂಡಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿಕೊಳುತ್ತಾರೆ. ಈಗ ಅವರ ಕಣ್ಣಿನಡಿಯಲ್ಲೇ ಹಗರಣ ನಡೆದಿದೆ. ಒಂದು ವರ್ಷದಿಂದ ಕಾಂಗ್ರೆಸ್‌ ಸರ್ಕಾರ ಲೂಟಿ ಗ್ಯಾರಂಟಿ ನೀಡಿದೆ’ ಎಂದರು.

‘ನಾಗೇಂದ್ರ ಅವರು ಈ ಪ್ರಕರಣದಲ್ಲಿ ಸಣ್ಣ ಆರೋಪಿ. ಇನ್ನೂ ದೊಡ್ಡ ಆರೋಪಿಗಳು ಇದರ ಹಿಂದೆ ಇದ್ದಾರೆ. ಅಕ್ರಮ ಹಣವನ್ನು ಸಚಿವರೊಬ್ಬರೇ ನುಂಗಿಲ್ಲ. ಇಡೀ ಸಚಿವ ಸಂಪುಟ ಶಾಮೀಲಾಗಿದ್ದು, ಹಣ ಹೈದರಾಬಾದ್‌ಗೆ ಹೋಗಿ ಆ ಬಳಿಕ ದೆಹಲಿಯನ್ನು ತಲುಪಿದೆ. ಆ ಕಾರಣಕ್ಕೆ ಸಿದ್ದರಾಮಯ್ಯ ಸಿಬಿಐ ತನಿಖೆ ಒಪ್ಪುತ್ತಿಲ್ಲ. ಈ ಎಲ್ಲ ಸತ್ಯ ಹೊರಬರಲು ಪ್ರಕರಣವನ್ನು ಸಿಬಿಐಗೆ ನೀಡಬೇಕು. ಈ ಹಗರಣದ ಬಗ್ಗೆ ರಾಹುಲ್‌ ಗಾಂಧಿ ಮತ್ತು ರಣದೀಪ್‌ ಸಿಂಗ್ ಸುರ್ಜೇವಾಲಾ ಅವರೂ ಉತ್ತರ ನೀಡಬೇಕು’ ಎಂದು ಆಗ್ರಹಿಸಿದರು.

ಬಿ.ವೈ ವಿಜಯೇಂದ್ರ ಮಾತನಾಡಿ, ಹೈದರಾಬಾದ್‌ನಲ್ಲಿ 18ಕ್ಕೂ ಹೆಚ್ಚು ಬ್ಯಾಂಕ್‌ ಖಾತೆಗಳನ್ನು ತೆರೆದು ಆ ಖಾತೆಗಳಿಗೆ ಹಣವನ್ನು ಅಕ್ರಮವಾಗಿ ವರ್ಗಾಯಿಸಿದ್ದಾರೆ. ಮುಖ್ಯಮಂತ್ರಿಯವರ ಸುಪರ್ದಿಯಲ್ಲಿರುವ ಹಣಕಾಸು ಇಲಾಖೆಯ ಅನುಮತಿ ಇಲ್ಲದೇ ಹಣದ ವರ್ಗಾವಣೆ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. 

‘ಈ ವಿಚಾರವನ್ನು ಇಲ್ಲಿಗೇ ಕೈಬಿಡುವುದಿಲ್ಲ. ವಿಪಕ್ಷವಾಗಿ ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಮುಖ್ಯಮಂತ್ರಿಯವರು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಆನೆ ನಡೆದಿದ್ದೇ ದಾರಿ ಎಂಬಂತೆ ಅವರು ವರ್ತಿಸುತ್ತಿದ್ದಾರೆ. ಈ ವಿಷಯದಲ್ಲಿ ರಾಜ್ಯವ್ಯಾಪಿ ಹೋರಾಟ ಮಾಡುತ್ತೇವೆ’ ಎಂದರು.

ನಿಯೋಗದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ.ಸುನಿಲ್‌ಕುಮಾರ್‌, ಶಾಸಕರಾದ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಎಸ್‌.ಆರ್‌.ವಿಶ್ವನಾಥ್‌, ವಿಧಾನಪರಿಷತ್‌ನ ವಿರೋಧ ಪಕ್ಷದ ಮುಖ್ಯಸಚೇತಕ ಎನ್‌.ರವಿಕುಮಾರ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT