ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಮಿತ್‌ ಶಾ ಭೇಟಿಯಾದ ಸಿದ್ದರಾಮಯ್ಯ: ಮಂಗಳೂರು ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Published 29 ಜೂನ್ 2024, 13:55 IST
Last Updated 29 ಜೂನ್ 2024, 13:55 IST
ಅಕ್ಷರ ಗಾತ್ರ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಶುಕ್ರವಾರ ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು.

ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.

ಭಾರತ ಸರ್ಕಾರವು ₹80 ಕೋಟಿ ವೆಚ್ಚದಲ್ಲಿ ಇಂಡಿಯನ್‌ ರಿಸರ್ವ್‌ ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು.

ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಯನ್ನು ತಲಾ ₹200 ಕೋಟಿಯಂತೆ ಒಟ್ಟು ₹1000 ಕೋಟಿ ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದರು.

ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟಡದಲ್ಲಿರುವ / ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ ₹3 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ₹300 ಕೋಟಿ ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಕೋರಿದರು.

ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್‌ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸಬೇಕು ಎಂದರು. ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT