ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟ ಸಮುದಾಯದವರ ಹಿತ ಕಾಯಲು ಬದ್ಧ: ಸಿದ್ದರಾಮಯ್ಯ

Published 17 ಜುಲೈ 2023, 16:50 IST
Last Updated 17 ಜುಲೈ 2023, 16:50 IST
ಅಕ್ಷರ ಗಾತ್ರ

ಬೆಂಗಳೂರು: ಪರಿಶಿಷ್ಟ ಜಾತಿಯವರ ಭೂಮಿಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಅದಕ್ಕಾಗಿ ಕೊಟ್ಟ ಮಾತಿನಂತೆ ಇದೇ 19ರಂದು ಅಧಿವೇಶನದಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಮೀನು ಪರಭಾರೆ ನಿಷೇಧ(ತಿದ್ದುಪಡಿ) ಮಸೂದೆಯನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಸೋಮವಾರ ಕಾಯ್ದೆ ತಿದ್ದುಪಡಿ ಕುರಿತು ಸಚಿವರು, ಅಧಿಕಾರಿಗಳು, ಕಾನೂನು ತಜ್ಞರು ಹಾಗೂ ವಿವಿಧ ಸಂಘಟನೆಗಳ ಮುಖಂಡರ ಜತೆ ಚರ್ಚಿಸಿದ ನಂತರ ಅವರು ಮಾತನಾಡಿದರು.

ಪರಿಶಿಷ್ಟ ಸಮುದಾಯವರ ಹಿತಾಸಕ್ತಿ ವಿಷಯದಲ್ಲಿ ಯಾವ ಒತ್ತಡಕ್ಕೂ ಮಣಿಯುವುದಿಲ್ಲ. ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಪರಿಶಿಷ್ಟರಿಗೆ ಸರ್ಕಾರ ಮಂಜೂರು ಮಾಡಿದ ಜಮೀನನ್ನು ಅನುಮತಿ ಇಲ್ಲದೇ ಮಾರಾಟ ಮಾಡುವುದಕ್ಕೆ ಈಗಿರುವ ಪಿಟಿಸಿಎಲ್‌ ಕಾಯ್ದೆ ನಿರ್ಬಂಧಿಸಿತ್ತು. ಆದರೆ, ಅಕ್ರಮ ಪರಭಾರೆ ಪ್ರಶ್ನಿಸಿ ಮನವಿ ಸಲ್ಲಿಸುವುದಕ್ಕೆ ಪಿಟಿಸಿಎಲ್‌ ಕಾಯ್ದೆಯಲ್ಲಿ ಕಾಲಮಿತಿ ನಿಗದಿಪಡಿಸಿರಲಿಲ್ಲ. ಕಾಲಮಿತಿ ನಿಗದಿಪಡಿಸದಿದ್ದರೆ ಅರ್ಜಿಗಳು ಮಾನ್ಯವಾಗುವುದಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿತ್ತು. ಹಾಗಾಗಿ, ಕಾಯ್ದೆ ಬಲ ಕಳೆದುಕೊಂಡಿತ್ತು ಎಂದರು.

ಭೂಮಿ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದರು.

ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, ಶ್ರೀಧರ್‌ ಕಲಿವೀರ, ಬಸವರಾಜ ಕೌತಾಳ್, ಮಂಜು, ಇಂದೂಧರ ಹೊನ್ನಾಪುರ, ಹರಿರಾಮ್, ಮಾವಳ್ಳಿ ಶಂಕರ್, ವಿ.ನಾಗರಾಜ್, ಎನ್.ಮುನಿಸ್ವಾಮಿ, ಎನ್.ವೆಂಕಟೇಶ್, ಡಿ.ಜಿ.ಸಾಗರ್‌ ಸೇರಿದಂತೆ ವಿವಿಧ ಸಂಘಟನೆಗಳ 35ಕ್ಕೂ ಹೆಚ್ಚು ಮುಖಂಡರು ತಮ್ಮ ಅಭಿಪ್ರಾಯ ಹಂಚಿಕೊಂಡರು. 

ಸಚಿವರಾದ ಜಿ.ಪರಮೇಶ್ವರ, ಕೆ.ಎಚ್. ಮುನಿಯಪ್ಪ, ಕೃಷ್ಣಬೈರೇಗೌಡ, ಎಚ್.ಸಿ.ಮಹದೇವಪ್ಪ, ಎಚ್.ಕೆ. ಪಾಟೀಲ, ಸತೀಶ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ಬಿ. ನಾಗೇಂದ್ರ, ಕೆ.ಎನ್. ರಾಜಣ್ಣ, ಆರ್.ಬಿ.ತಿಮ್ಮಾಪುರ, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT