ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನನ್ನದು ಗರ್ವ ಅಲ್ಲ, ಸಹಜ ಸ್ವಾಭಿಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

Published 30 ಮಾರ್ಚ್ 2024, 14:25 IST
Last Updated 30 ಮಾರ್ಚ್ 2024, 14:25 IST
ಅಕ್ಷರ ಗಾತ್ರ

ಬೆಂಗಳೂರು: ‘ನನ್ನ ಗರ್ವಭಂಗ ಮಾಡುತ್ತೇನೆಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ. ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮ ಹೇಳಿಕೆ ನೀಡಿರುವ ಮುಖ್ಯಮಂತ್ರಿ, ‘ವೈಯಕ್ತಿಕ ಇಲ್ಲವೆ ರಾಜಕೀಯ ಲಾಭಕ್ಕಾಗಿ ನಾನು ಯಾರ ಜೊತೆಯಲ್ಲಿಯೂ ರಾಜಿ ಮಾಡಿಕೊಳ್ಳಲಾರೆ. ಅಂತಹ ಪರಿಸ‍್ಥಿತಿ ಬಂದೊದಗಿದರೆ ರಾಜಕೀಯವಾಗಿ ನಿವೃತ್ತಿಯಾಗುತ್ತೇನೆಯೇ ವಿನಾ, ಕರ್ನಾಟಕದ ಹಿತಾಸಕ್ತಿಯ ವಿರೋಧಿಗಳ ಜೊತೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಾರೆ’ ಎಂದು ಕೆಣಕಿದ್ದಾರೆ.

‘ಹತ್ತು ವರ್ಷಗಳ ಅಧಿಕಾರ ಅವಧಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ಹಿತಾಸಕ್ತಿ ವಿರುದ್ಧ ಕೆಲಸ ಮಾಡಿದೆ. ನಾಡಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆ, ಕಾವೇರಿ, ಕೃಷ್ಣ, ಮಹದಾಯಿ ಜಲವಿವಾದಗಳಲ್ಲಿ ಅನ್ಯಾಯ, ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗ ಯುವಜನರಿಗೆ ವಂಚನೆ…. ಹೀಗೆ ಕರ್ನಾಟಕಕ್ಕೆ ದ್ರೋಹ ಎಸಗುತ್ತಾ ಬಂದಿದೆ. ಹೀಗಿದ್ದರೂ, ದೇಶದ ಎಲ್ಲ ಸಮಸ್ಯೆಗಳಿಗೆ ಮೋದಿ ಮತ್ತು ಶಾ ಬಳಿ ಪರಿಹಾರವಿದೆ ಎಂದು ಹೇಳುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯಾದರೂ ನಿಮ್ಮನ್ನು ಚುಚ್ಚಲಿಲ್ಲವೇ’ ಎಂದೂ ಪ್ರಶ್ನಿಸಿದ್ದಾರೆ.

‘ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯಕ್ಕೆ ಕ್ಷಮೆಯೇ ಇಲ್ಲ. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮೊದಲಾದ ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಕೂಡಾ ಕೇಂದ್ರ ಸರ್ಕಾರದ ಅನ್ಯಾಯವನ್ನು ಕೂಗಿ ಹೇಳುತ್ತಿವೆ. ಆದರೆ, ಕರ್ನಾಟಕದ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಮಾತ್ರ ನಮ್ಮ ನಾಡಿನ ವಿರೋಧಿಗಳ ಜೊತೆಯಲ್ಲಿ ರಾಜಿ ಮಾಡಿಕೊಂಡು ಕನ್ನಡಿಗರಿಗೆ ದ್ರೋಹ ಎಸಗಿದೆ’ ಎಂದು ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT