ಮೈಸೂರು: ಮುಡಾ ನಿವೇಶನ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾದ ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ.27ರಿಂದ ಮೂರು ದಿನಗಳವರೆಗೆ ಮೈಸೂರು ಪ್ರವಾಸ ಕೈಗೊಂಡಿದ್ದಾರೆ.
ವಿಶೇಷ ವಿಮಾನದಲ್ಲಿ ಶುಕ್ರವಾರ ಬೆಳಿಗ್ಗೆ 10.20ಕ್ಕೆ ಬಂದಿಳಿಯುವ ಅವರು, ಬೆಳಿಗ್ಗೆ 10.45ಕ್ಕೆ ಅಂಬಾವಿಲಾಸ ಅರಮನೆ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಆಯೋಜಿಸಿರುವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ 11.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ವಾಸ್ತವ್ಯ ಹೂಡಲಿದ್ದಾರೆ.
ಸೆ.28ರಂದು ಬೆಳಿಗ್ಗೆ 10ಕ್ಕೆ ಸಿದ್ಧಾರ್ಥನಗರದಲ್ಲಿ ಖಾಸಗಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11ಕ್ಕೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3ಕ್ಕೆ ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಶತಮಾನೋತ್ಸವ ಸಮಾರೋಪ ಸಮಾರಂಭ ಮತ್ತು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ನಗರದಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಸೆ.29ರಂದು ಬೆಳಿಗ್ಗೆ 11ಕ್ಕೆ ಹಿಂದುಳಿದ ವರ್ಗಗಳ ವಸತಿನಿಲಯಗಳ ಹಳೆಯ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಮತ್ತು ಸಂಜೆ 4ಕ್ಕೆ ಅಶೋಕಪುರಂನ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಸಂಜೆ 6ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.