ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯವರದ್ದು ಡೋಂಗಿ ಹಿಂದುತ್ವ: ಸಿಎಂ ವ್ಯಂಗ್ಯ

Published 28 ಡಿಸೆಂಬರ್ 2023, 8:34 IST
Last Updated 28 ಡಿಸೆಂಬರ್ 2023, 8:34 IST
ಅಕ್ಷರ ಗಾತ್ರ

ಬೆಂಗಳೂರು: ‘ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್‌ನಿಂದ ಮಾತ್ರ. ಬಿಜೆಪಿಯವರದ್ದು ಡೋಂಗಿ ಹಿಂದುತ್ವ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಕೆಪಿಸಿಸಿ ಕಚೇರಿಯ ಭಾರತ್ ಜೋಡೊ ಸಭಾಂಗಣದಲ್ಲಿ ಗುರುವಾರ ನಡೆದ 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿ, ಜನಸಂಘ, ಆರೆಸ್ಸೆಸ್ ಮತ್ತು ಸಂಘ ಪರಿವಾರದ ಒಬ್ಬೇ ಒಬ್ಬರು ಬ್ರಿಟಿಷರ ವಿರುದ್ಧ ಹೋರಾಟ ಮಾಡಿಲ್ಲ. ಬ್ರಿಟಿಷರ ಅವಧಿಯಲ್ಲೇ ಆರೆಸ್ಸೆಸ್ ಹುಟ್ಟಿತ್ತು‌. ಆದರೆ, ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಒಂದು ದಿನವೂ  ಭಾಗವಹಿಸಲಿಲ್ಲ. ಬಿಜೆಪಿಯ ಡೋಂಗಿತನವನ್ನು ಜನರಿಗೆ ಮನವರಿಕೆ ಮಾಡಬೇಕಿದೆ’ ಎಂದರು.

‘ಹಿಂದೂ ಬೇರೆ. ಹಿಂದುತ್ವವೇ ಬೇರೆ. ನಾವು ರಾಮನನ್ನು ಪೂಜಿಸುವುದಿಲ್ಲವೇ? ನಮ್ಮೂರುಗಳಲ್ಲಿ ರಾಮಮಂದಿರ ಕಟ್ಟಿಲ್ಲವೇ? ರಾಮನ ಭಜನೆ ಮಾಡುವುದಿಲ್ಲವೇ? ’ ಎಂದೂ ಪ್ರಶ್ನಿಸಿದರು.

‘ನೆಹರೂ- ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಇಂಟರ್ ನೆಟ್ ದೇಶದ ತುಂಬ ವಿಸ್ತರಿಸಲು ಅಡಿಪಾಯ ಹಾಕಿದವರು ರಾಜೀವ್ ಗಾಂಧಿ. ಬಿಜೆಪಿಯವರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ. ಸತ್ಯದ ತಲೆ ಮೇಲೆ ಹೊಡೆದಂತೆ ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು’ ಎಂದರು.

‘ಸ್ವಾತಂತ್ರ್ಯದ ಹೊಸ್ತಿಲಲ್ಲಿ ಭಾರತದ ತುಂಬ ಸಾವಿರಾರು ಸಮಸ್ಯೆಗಳಿದ್ದವು. ಆ ಎಲ್ಲ ಸಮಸ್ಯೆಗಳಿಗೆ ಪರಿಹಾರವಾಗಿ ಬಂದಿದ್ದು ಕಾಂಗ್ರೆಸ್. ಈಗಲೂ ಹಲವು ಸಮಸ್ಯೆಗಳಿವೆ. ಇವುಗಳ ಪರಿಹಾರಕ್ಕೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ. ಕಾಂಗ್ರೆಸ್ ಹೋರಾಟದ ಮಾರ್ಗದಲ್ಲೇ ಅಧಿಕಾರಕ್ಕೆ ಬರುತ್ತದೆ. ಭಾರತ್ ಜೋಡೊ ನಂತರ ರಾಹುಲ್ ಗಾಂಧಿ ಅವರು ಮತ್ತೊಂದು ಸುತ್ತು ಪಾದಯಾತ್ರೆ ಹೊರಟಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ನೇತೃತ್ವ ವಹಿಸುತ್ತಾರೆ. ಪ್ರಧಾನಿ ಆಗುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮಾಜಿ ಸಚಿವೆ ರಾಣಿ ಸತೀಶ್ ಭಾಗವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT