ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.11ರಿಂದ ಕಾಂಗ್ರೆಸ್‌ ‘ಪ್ರಜಾಧ್ವನಿ’ ಬಸ್‌ ಯಾತ್ರೆ

Last Updated 4 ಜನವರಿ 2023, 12:20 IST
ಅಕ್ಷರ ಗಾತ್ರ

ಬೆಳಗಾವಿ: ‘ಜನರಿಗೆ ಉತ್ತಮ ಆಡಳಿತ ಒದಗಿಸುವಲ್ಲಿ ವಿಫಲವಾದ ಉಭಯ ಸರ್ಕಾರಗಳ ವಿರುದ್ಧ ಆಂದೋಲನ ಮಾದರಿಯಲ್ಲಿ ‘ಪ್ರಜಾಧ್ವನಿ’ ಬಸ್‌ ಯಾತ್ರೆ ಹಮ್ಮಿಕೊಂಡಿದ್ದೇವೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಸವರಾಜ ರಾಯರೆಡ್ಡಿ ಹೇಳಿದರು.

ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜ.11ರಂದು ಇಲ್ಲಿನ ವೀರಸೌಧದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಯಾತ್ರೆಗೆ ಚಾಲನೆ ನೀಡಲಾಗುವುದು. ಅಂದು ಬೆಳಿಗ್ಗೆ ಚಿಕ್ಕೋಡಿ ಮತ್ತು ಮಧ್ಯಾಹ್ನ ಬೆಳಗಾವಿಯ ಅಂಜುಮನ್‌–ಎ–ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಸಾರ್ವಜನಿಕ ಸಭೆ ನಡೆಸಲಾಗುವುದು. ಜ.27ರವರೆಗೆ ನಡೆಯಲಿರುವ ಯಾತ್ರೆ 21 ಜಿಲ್ಲೆಗಳಲ್ಲಿ ಸಂಚರಿಸಲಿದೆ’ ಎಂದು ಹೇಳಿದರು.

‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ರಾಜ್ಯ ಸರ್ಕಾರವಂತೂ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇವುಗಳನ್ನು ಜನರಿಗೆ ತಿಳಿಸಿ, ಬಿಜೆಪಿ ಹಟಾವೋ ಚಳವಳಿ ನಡೆಸಲಾಗುವುದು’ ಎಂದರು.

‘ಈ ಯಾತ್ರೆ ಮುಗಿದ ನಂತರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉತ್ತರ ಕರ್ನಾಟಕದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. 14 ಲೋಕಸಭಾ ಕ್ಷೇತ್ರಗಳ 112 ವಿಧಾನಸಭೆ ಕ್ಷೇತ್ರಗಳಲ್ಲಿ ಸಂಚರಿಸಲಿರುವ ಅವರು, ಬೆಳಗಾವಿ ಜಿಲ್ಲೆಯಲ್ಲೂ 15 ಕ್ಷೇತ್ರಗಳಿಗೆ ಭೇಟಿ ಕೊಡಲಿದ್ದಾರೆ. ಜ.30 ಅಥವಾ ಫೆ.2ರಂದು ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ಪ್ರವಾಸ ಆರಂಭಿಸಲಿದ್ದಾರೆ’ ಎಂದು ಹೇಳಿದರು.

‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಾಮೂಹಿಕ ನಾಯತ್ವದಲ್ಲೇ ನಾವೂ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಿದ್ದೇವೆ’ ಎಂದೂ ಸ್ಪಷ್ಟಪಡಿಸಿದರು.

‘ಜ.5ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯಲ್ಲಿ ವಿವಿಧ ಪೆನಲ್‌ ನಾಯಕರು, ಗೆಲ್ಲುವ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಿದ್ದೇವೆ. ನಂತರ ಎಐಸಿಸಿ ವರಿಷ್ಠರೊಂದಿಗೆ ಚರ್ಚಿಸಿ, ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT