ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದಲ್ಲಿ ಕಲುಷಿತ ನೀರು ಪ್ರಕರಣ|ಮೂರು ಲಕ್ಷ ನೀರಿನ ಮಾದರಿ ಸಂಗ್ರಹ: ಪ್ರಿಯಾಂಕ್‌

Published 25 ಜೂನ್ 2024, 16:10 IST
Last Updated 25 ಜೂನ್ 2024, 16:10 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕೆಲವೆಡೆ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾಗಿರುವ ಕಾರಣದಿಂದ ಕಳೆದ ವಾರ ರಾಜ್ಯದಾದ್ಯಂತ ಮೂರು ಲಕ್ಷ ನೀರಿನ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿದ ಸಚಿವರು, ಕುಡಿಯುವ ನೀರು ಕಲುಷಿತಗೊಂಡಿರುವ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದರು. ಆ ಬಳಿಕ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಿರಿಯ ಎಂಜಿನಿಯರ್‌ಗಳು ಜೂನ್‌ 14ರಿಂದ 21ರವರೆಗೆ 3,000 ಗ್ರಾಮಗಳಲ್ಲಿ ನೀರಿನ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಕುಡಿಯುವ ನೀರು ಕಲುಷಿತಗೊಳ್ಳದಂತೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ಬಳಿಯ ಮುಣಜೇನಹಳ್ಳಿ ಹಾಗೂ ಬೆಳಗಾವಿ ಜಿಲ್ಲೆಯ ಗೋಕಾಕ ಬಳಿಯ ಕನಸಗೇರಿ ಗ್ರಾಮಗಳಲ್ಲಿ ಕುಡಿಯುವ ನೀರು ಕಲುಷಿತಗೊಂಡು ಸಮಸ್ಯೆಯಾಗಿತ್ತು. ಈ ಗ್ರಾಮಗಳಿಗೆ ಪರ್ಯಾಯ ಮೂಲಗಳಿಂದ ನೀರು ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಮತ್ತು  ಗ್ರಾಮೀಣ ನೀರು ಸರಬರಾಜು ಇಲಾಖೆ ಆಯುಕ್ತ ಕೆ.ನಾಗೇಂದ್ರಪ್ರಸಾದ್‌ ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT