ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಇದೇ 7ರಂದು ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Published 2 ಫೆಬ್ರುವರಿ 2024, 16:24 IST
Last Updated 2 ಫೆಬ್ರುವರಿ 2024, 16:24 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸದ ಮತ್ತು ರೈತರಿಗೆ ಪರಿಹಾರ ಮೊತ್ತ ಬಿಡುಗಡೆ ಮಾಡದಿರುವ ಸರ್ಕಾರದ ಧೋರಣೆಯನ್ನು ವಿರೋಧಿಸಿ ಇದೇ 7 ರಂದು ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ.

ಅದೇ ದಿನ ರಾಜ್ಯ ಕಾಂಗ್ರೆಸ್‌ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಉದ್ದೇಶಿಸಿದೆ. ಅದಕ್ಕೆ ಪ್ರತಿಯಾಗಿ ಪ್ರತಿಭಟನೆ ನಡೆಸಲು ಬಿಜೆಪಿಯ ಪ್ರಮುಖರ ಸಮಿತಿ ಸಭೆ ನಿರ್ಧರಿಸಿದೆ.

ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಿದ್ದು, ಪಕ್ಷದ ಎಲ್ಲ ಶಾಸಕರು ಮತ್ತು ವಿಧಾನಪರಿಷತ್‌ ಸದಸ್ಯರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿಯ ಪ್ರಮುಖರ ಸಮಿತಿ ಸದಸ್ಯ ಸಿ.ಟಿ.ರವಿ ಸುದ್ದಿಗಾರರಿಗೆ ತಿಳಿಸಿದರು.

ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲಾಗಿದೆ. ಕುಡಿಯುವ ನೀರಿನ ಅಭಾವ ಇರುವ ಕಡೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ, ರೈತರಿಗೆ ಪರಿಹಾರ ನೀಡಿಲ್ಲ, ಇಂತಹ ರೈತ ವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.

ಮುಂಬರುವ ರಾಜ್ಯಸಭೆ, ವಿಧಾನಪರಿಷತ್‌ ಹಾಗೂ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಬಗ್ಗೆ ವರಿಷ್ಠರ ಜತೆ ಚರ್ಚಿಸಲು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಅಧಿಕಾರ ನೀಡಲಾಯಿತು ಎಂದು ರವಿ ತಿಳಿಸಿದರು.

ರಾಜ್ಯಸಭಾ ಚುನಾವಣೆಯಲ್ಲಿ ಎರಡನೇ ಅಭ್ಯರ್ಥಿಯನ್ನು ಮೈತ್ರಿಕೂಟದಿಂದ ಕಣಕ್ಕಿಳಿಸುವ ಬಗ್ಗೆ ವರಿಷ್ಠರ ಜತೆ ಚರ್ಚೆ ನಡೆಸುವ ಅಧಿಕಾರವನ್ನೂ ವಿಜಯೇಂದ್ರ ಅವರಿಗೆ ನೀಡಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT