ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದು

Published : 22 ಆಗಸ್ಟ್ 2024, 16:06 IST
Last Updated : 22 ಆಗಸ್ಟ್ 2024, 16:06 IST
ಫಾಲೋ ಮಾಡಿ
Comments

ಬೆಂಗಳೂರು: ‘ಎಲ್ಲಾ ಹಿಂದೂಗಳು ಕಾಂಗ್ರೆಸ್‌ ಪಕ್ಷವನ್ನು ಬಹಿಷ್ಕರಿಸುತ್ತಾರೆ ಎಂದು ಮಾಧ್ಯಮಗಳ ಮುಂದೆ ಸಾರ್ವಜನಿಕ ಹೇಳಿಕೆ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ’ ಎಂಬ ಆರೋಪದಡಿ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಗದಗ ಜಿಲ್ಲೆಯ 1ನೇ ಹೆಚ್ಚುವರಿ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿನ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

‘ಪ್ರಕರಣಕ್ಕೆ ಸಂಬಂಧಿಸಿದ ಖಾಸಗಿ ದೂರು ಮತ್ತು ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ಯತ್ನಾಳ್‌ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ‘ದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಯತ್ನಾಳ್‌ ಪರ ವಕೀಲ ವೆಂಕಟೇಶ್ ಪಿ.ದಳವಾಯಿ, ‘ವಿಚಾರಣಾ ನ್ಯಾಯಾಲಯ ಅರ್ಜಿದಾರರಿಗೆ ಸಮನ್ಸ್‌ ಜಾರಿಗೊಳಿಸಿದೆ. ಆದರೆ, ಈ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆ–1860ರ ಕಲಂ 188 ಅನ್ವಯ ಆಗುವುದಿಲ್ಲ. ಹಾಗಾಗಿ, ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು’ ಎಂದು ಕೋರಿದರು.

ಪ್ರಾಸಿಕ್ಯೂಷನ್‌ ಪರ ವಕೀಲ ಬಿ.ಎನ್‌.ಜಗದೀಶ್‌ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರಾದರೂ ಕೆಲ ಕಾಲ ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ‘ಅರ್ಜಿದಾರರ ವಿರುದ್ಧದ ಪ್ರಕರಣದ ವಿಚಾರಣೆಗೆ ಅನುಮತಿಸಿದರೆ, ಅದು ಕಾನೂನಿನ ದುರ್ಬಳಕೆಯಾಗಲಿದೆ’ ಎಂಬ ಅಭಿಪ್ರಾಯದೊಂದಿಗೆ ಪ್ರಕರಣ ರದ್ದುಗೊಳಿಸಿ ಆದೇಶಿಸಿತು.

ಪ್ರಕರಣವೇನು?

ವಿಧಾನಸಭಾ ಚುನಾವಣೆಯ ವೇಳೆ 2023 ಮೇ 2ರಂದು ಗದಗದಲ್ಲಿ ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಪರ ರೋಡ್ ಶೋ ನಡೆಸಲಾಗಿತ್ತು. ಈ ವೇಳೆ, ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ, ಯತ್ನಾಳ್‌, ‘ಎಲ್ಲಾ ಹಿಂದೂಗಳು ಬಾಯ್ಕಾಟ ಮಾಡತೀವಿ’ ಎಂದು ಉತ್ತರಿಸಿದ್ದರು. ಇದು ಟಿ.ವಿ.ಚಾನೆಲ್‌ಗಳಲ್ಲಿ ಪ್ರಸಾರವಾಗಿತ್ತು.

‘ಈ ಉತ್ತರದ ಮೂಲಕ ಯತ್ನಾಳ್ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ’ ಎಂದು ವಿಚಕ್ಷಣಾ ದಳದ ಮಂಜುನಾಥ ಎಸ್‌ ಕಲಬುರ್ಗಿ ದೂರು ನೀಡಿದ್ದರು. ದೂರು ಆಧರಿಸಿ ಗದಗ ಜಿಲ್ಲಾ ನ್ಯಾಯಾಲಯ ಖುದ್ದು ಹಾಜರಾಗುವಂತೆ ಯತ್ನಾಳ್ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT