ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ರೂಪಾ ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

Published 6 ಜೂನ್ 2023, 3:03 IST
Last Updated 6 ಜೂನ್ 2023, 3:03 IST
ಅಕ್ಷರ ಗಾತ್ರ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ವಿರುದ್ಧ ಹೂಡಿರುವ ಮಾನನಷ್ಟಕ್ಕೆ ಸಂಬಂಧಿಸಿದ ಖಾಸಗಿ ದೂರನ್ನು ರದ್ದುಪಡಿಸುವಂತೆ ಕೋರಿ, ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಹಿಂದೆ ಸರಿದಿದ್ದಾರೆ.

ಈ ಕುರಿತಂತೆ ಡಿ.ರೂಪಾ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ನಿಗದಿಯಾಗಿತ್ತು.

ವಿಚಾರಣೆ ವೇಳೆ ನ್ಯಾಯಮೂರ್ತಿಗಳು, ’ನಾನು ಈ ಹಿಂದೆ ವಕೀಲಿಕೆ ಮಾಡುವಾಗ ಬೇರೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ರೋಹಿಣಿ ಸಿಂಧೂರಿ ಅವರನ್ನು ಪ್ರತಿನಿಧಿಸಿದ್ದೆ. ಹೀಗಾಗಿ, ಈ ಅರ್ಜಿ ವಿಚಾರಣೆ ನಡೆಸುವುದಿಲ್ಲ‘ ಎಂದು ಹಿಂದೆ ಸರಿಯುತ್ತಿರುವುದಕ್ಕೆ ಕಾರಣ ನೀಡಿದರು. ಅರ್ಜಿಯನ್ನು ಬೇರೊಂದು ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸುವಂತೆ ಕಡತವನ್ನು ಮುಖ್ಯ ನ್ಯಾಯಮೂರ್ತಿ ಅವರ ಮುಂದಿರಿಸಲು ರಿಜಿಸ್ಟ್ರಾರ್‌ಗೆ ನಿರ್ದೇಶಿಸಿದರು.

ಪ್ರಕರಣವೇನು?:

‘ಡಿ.ರೂಪಾ ಮೌದ್ಗಿಲ್ 2023ರ ಫೆಬ್ರುವರಿ 18 ಮತ್ತು 19ರಂದು ತಮ್ಮ ಫೇಸ್‌ ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ಟಿ.ವಿ. ಮಾಧ್ಯಮಗಳಲ್ಲೂ ಹೇಳಿಕೆ ನೀಡಿದ್ದಾರೆ. ಈ ಆರೋಪಗಳು ನನ್ನ ತೇಜೋವಧೆ ಮಾಡುವ ದುರದ್ದೇಶದಿಂದ ಕೂಡಿವೆ. ಇದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿದೆ‘ ಎಂದು ಆರೋಪಿಸಿ ರೋಹಿಣಿ ಸಿಂಧೂರಿ ಮಾರ್ಚ್‌ 3ರಂದು ವಿಚಾರಣಾ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ‘ಪರಿಹಾರವಾಗಿ  ₹ 1 ಕೋಟಿ ನೀಡಲು ಡಿ. ರೂಪಾಗೆ ಆದೇಶಿಸಬೇಕು ಮತ್ತು ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು‘ ಎಂದು ಕೋರಿದ್ದರು.

ದೂರನ್ನು ಪರಿಗಣಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ಆದೇಶಿಸಿತ್ತು. ಪ್ರಕರಣ ರದ್ದುಪಡಿಸುವಂತೆ ಕೋರಿ ರೂಪಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅವರ ವಕೀಲ ಮಧುಕರ್ ದೇಶಪಾಂಡೆ ವಕಾಲತ್ತು ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT