ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಭಾಷೆ | ಫೆ. 28 ಗಡುವು: ಸಿಎಂ ಸಿದ್ದರಾಮಯ್ಯ

Published 28 ಡಿಸೆಂಬರ್ 2023, 10:18 IST
Last Updated 28 ಡಿಸೆಂಬರ್ 2023, 10:18 IST
ಅಕ್ಷರ ಗಾತ್ರ

ಬೆಂಗಳೂರು: ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆಗೆ ಸುಗ್ರೀವಾಜ್ಞೆಯ ಮೂಲಕ ತಿದ್ದುಪಡಿ ತಂದು, 2024ರ ಫೆ. 28ರೊಳಗೆ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60 ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವ ಕುರಿತಂತೆ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ, ‘ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಲು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ– 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತರಲಾಗುವುದು. ಈ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ತಕ್ಷಣ ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ಈ ಹಿಂದೆ 2018ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ 60 ಕನ್ನಡ ಭಾಷೆ ಹಾಗೂ ಶೇ 40ರಷ್ಟು ಇತರ ಭಾಷೆಯಲ್ಲಿ ಇರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು’ ಎಂದರು. 

‘ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ, ಆಡಳಿತ ಭಾಷೆ. ಇದರಲ್ಲಿ ಯಾವುದೇ ರಾಜಿ ಇಲ್ಲ’ ಎಂದ ಅವರು, ‘ಶಾಂತಿಯುತ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಸಹಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ನ್ಯಾಸಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ. ಈ ಕಾಯ್ದೆಯ ನಿಯಮ 17(8)ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿ ಇರತಕ್ಕದ್ದು ಎಂದೂ ಇದೆ. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ. ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು’ ಎಂದು ಮುಖ್ಯಮಂತ್ರಿ ವಿವರಿಸಿದರು.

‘ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು ಎಂದು ಹೈಕೋರ್ಟ್‌ 2022ರ ಮಾರ್ಚ್‌ 3ರಂದು ಹೇಳಿದೆ. ರಾಜ್ಯ ಸರ್ಕಾರ ಇದನ್ನು ಖಾತರಿಪಡಿಸಬೇಕು ಎಂದೂ ಸ್ಪಷ್ಟವಾದ ಆದೇಶ ಹೊರಡಿಸಿದೆ. ರಾಜ್ಯದ ಹಿತದೃಷ್ಟಿಯಿಂದ ಶಾಂತಿಯುತ ಪ್ರತಿಭಟನೆ ಮಾಡಿದರೆ ನಾವು ವಿರೋಧಿಸುವುದಿಲ್ಲ. ಆದರೆ, ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರಾದರೂ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು’ ಎಂದರು.

ಸಭೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ನಸೀರ್ ಅಹಮದ್‌, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅತೀಕ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಭಾಗವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT