ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ತಡೆ: ಆದೇಶ ಮಾರ್ಪಾಡಿಗೆ ‘ಸುಪ್ರೀಂ’ಗೆ ಮೊರೆ

Published 9 ಜನವರಿ 2024, 14:07 IST
Last Updated 9 ಜನವರಿ 2024, 14:07 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದಲ್ಲಿ 13,352 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ನೀಡಿರುವ ತಡೆಯಾಜ್ಞೆಯನ್ನು ಮಾರ್ಪಡಿಸಬೇಕು ಎಂದು ಕೋರಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದೆ. 

ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್ ವಿಭಾಗೀಯ ಪೀಠವು 2023ರ ಅಕ್ಟೋಬರ್‌ 13ರಂದು ಆದೇಶಿಸಿತ್ತು. ಈ ಆದೇಶಕ್ಕೆ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು 2024ರ ಜನವರಿ 3ರಂದು ತಡೆಯಾಜ್ಞೆ ನೀಡಿತ್ತು. 

‘ತಡೆಯಾಜ್ಞೆಯಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಹೀಗಾಗಿ, ನೇಮಕಾತಿ ಆದೇಶಗಳನ್ನು ಹೊರಡಿಸಿದ ಶಿಕ್ಷಕರಿಗೆ ಉದ್ಯೋಗವನ್ನು ಮುಂದುವರಿಸಲು ಅನುಮತಿ ನೀಡಬೇಕು’ ಎಂದು ರಾಜ್ಯ ಸರ್ಕಾರ ಕೋರಿದೆ. ಕರ್ನಾಟಕ ಸರ್ಕಾರವು ವಕೀಲ ಡಿ.ಎಲ್‌.ಚಿದಾನಂದ ಮೂಲಕ ಅರ್ಜಿ ಸಲ್ಲಿಸಿದೆ. 

‘ದೊಡ್ಡ ಸಂಖ್ಯೆಯ ಶಿಕ್ಷಕರ ನೇಮಕಕ್ಕೆ ತಡೆ ನೀಡಲಾಗಿದೆ. ಶೈಕ್ಷಣಿಕ ವರ್ಷದ ನಿರ್ಣಾಯಕ ಘಟ್ಟದಲ್ಲಿ ಇಷ್ಟೇ ಪ್ರಮಾಣದ ಅತಿಥಿ ಶಿಕ್ಷಕರ ಸೇವೆ ಪಡೆಯಲು ಸಾಧ್ಯವಿಲ್ಲ. ಇದಲ್ಲದೆ, ಅನೇಕ ಅತಿಥಿ ಶಿಕ್ಷಕರು ಗ್ರಾಮೀಣ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಲು ಹಿಂಜರಿಯುತ್ತಾರೆ’ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರವು ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸುವಾಗ ವಿವಾಹಿತ ಮಹಿಳೆಯ ಪತಿಯ ಆದಾಯ ಪ್ರಮಾಣಪತ್ರವನ್ನು ಪರಿಗಣಿಸಿತ್ತು. ‘ಮದುವೆಯಾದ ಮಹಿಳೆಯರು ಪತಿಯ ಆದಾಯ ಪ್ರಮಾಣಪತ್ರವನ್ನೇ ಸಲ್ಲಿಸಬೇಕು ಎನ್ನುವ ಕುರಿತು ನೇಮಕಾತಿ ಅಧಿಸೂಚನೆಯಲ್ಲಿ ಸ್ಪಷ್ಟ ನಿರ್ದೇಶನ ಇರಲಿಲ್ಲ. ಮೆರಿಟ್‌ ಇದ್ದರೂ ನಮ್ಮನ್ನು ನೇಮಕಾತಿ ಪಟ್ಟಿಯಿಂದ ಕೈಬಿಡಲಾಗಿದೆ’ ಎಂದು ಆರೋಪಿಸಿ ಅವಕಾಶವಂಚಿತರು ಹೈಕೋರ್ಟ್‌ನ ಮೆಟ್ಟಿಲೇರಿದ್ದರು. 

ಹೈಕೋರ್ಟ್‌ನ ಏಕಸದಸ್ಯ ಪೀಠವು, ‘ವಿವಾಹಿತ ಮಹಿಳೆಯ ತಂದೆಯ ಆದಾಯ ಪ್ರಮಾಣಪತ್ರವನ್ನೂ ಪರಿಗಣಿಸಬೇಕು’ ಎಂದು ಆದೇಶಿಸಿ, ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರದ್ದುಗೊಳಿಸಿತ್ತು. ಕೋರ್ಟ್‌ ಆದೇಶದಂತೆ ಸರ್ಕಾರವು ಆಯ್ಕೆಪಟ್ಟಿಯನ್ನು ಪರಿಷ್ಕರಿಸಿತ್ತು.  ಹೊಸ ಪಟ್ಟಿ ಪ್ರಕಟಿಸಿದಾಗ ಮೊದಲಿದ್ದ ಪಟ್ಟಿಯಿಂದ 451 ಅಭ್ಯರ್ಥಿಗಳು ಹೊರಗುಳಿದರು. ಪ್ರಕರಣ ಮತ್ತೆ ಕೋರ್ಟ್‌ ಮೆಟ್ಟಿಲೇರಿತ್ತು. ಏಕಸದಸ್ಯ ಪೀಠದ ಆದೇಶವನ್ನು ದ್ವಿಸದಸ್ಯ ಪೀಠ ರದ್ದುಗೊಳಿಸಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT