ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವೇತನ ಆಯೋಗದ ವರದಿ ಜಾರಿಗೆ ವಿಳಂಬ: ಸಿ.ಎಸ್. ಷಡಾಕ್ಷರಿ ಅಸಮಾಧಾನ

Published 19 ಜೂನ್ 2024, 8:31 IST
Last Updated 19 ಜೂನ್ 2024, 8:31 IST
ಅಕ್ಷರ ಗಾತ್ರ

ಶಿವಮೊಗ್ಗ: ಏಳನೇ ವೇತನ ಆಯೋಗದ ವರದಿ ಜಾರಿಗೆ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯೋಗದ ವರದಿ ಅನುಷ್ಠಾನದ ಕುರಿತು ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳುವ ವಿಶ್ವಾಸವಿದೆ ಎಂದರು.

ಹಿಂದೆಲ್ಲಾ ವೇತನ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿದ ಒಂದು ತಿಂಗಳ ಒಳಗಾಗಿ ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಸಂಪ್ರದಾಯವಿತ್ತು. ಆದರೆ ಏಳನೇ ವೇತನ ಆಯೋಗ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ನಾಲ್ಕು ತಿಂಗಳು ಗತಿಸಿವೆ. ಆದರೆ ಇನ್ನೂ ವರದಿ ಜಾರಿಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಜೂನ್ ಅಂತ್ಯದ ಒಳಗೆ ಸರ್ಕಾರ ಆಯೋಗದ ವರದಿಯನ್ನು ಜಾರಿಗೊಳಿಸುವ ವಿಶ್ವಾಸವಿದೆ. ಒಂದು ವೇಳೆ ಜಾರಿಯಾಗದಿದ್ದರೆ ಮುಂದೇನು ಮಾಡಬೇಕು ಎಂಬುದರ ಬಗ್ಗೆ ಸಂಘದ ಕಾರ್ಯಕಾರಿ ಮಂಡಳಿಯಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹೊಸ ಪಿಂಚಣಿ ಪದ್ಧತಿ ರದ್ದಾಗಬೇಕು. ಹಳೆ ಪಿಂಚಣಿ ಪದ್ಧತಿ ಜಾರಿಗೆ ಬರಬೇಕು ಎಂದು ಸಂಘ ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದೆ. ಸರ್ಕಾರ ನೌಕರರ, ಅವರ ಕುಟುಂಬಗಳ ಹಿತದೃಷ್ಟಿಯಿಂದ ಹಳೆ ಪಿಂಚಣಿ ವ್ಯವಸ್ಥೆಯನ್ನು ಶೀಘ್ರ ಜಾರಿಗೆ ತರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT