ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ ನಡೆಸಿದ ಮಾತ್ರಕ್ಕೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಆಗಿಬಿಡುತ್ತದೆಯೇ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಪ್ರಶ್ನಿಸಿದರು.
ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಪುಟ ಸಭೆ ನಡೆಸುವ ಮೂಲಕ ಬಿಟ್ಟಿ ಪ್ರಚಾರ ಗಿಟ್ಟಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಹೊರಟಿದೆ. ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ ಎಂದು ದೂರಿದರು.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿವರ್ಷ ₹5,000 ಕೋಟಿ ನೀಡುವುದಾಗಿ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಲ್ಲ. ಬಳ್ಳಾರಿಯಲ್ಲಿ ‘ಜವಳಿ ಪಾರ್ಕ್’ ಸ್ಥಾಪಿಸಲು ಕ್ರಮ ಕೈಗೊಂಡಿಲ್ಲ, ಕಲ್ಯಾಣ ಕರ್ನಾಟಕ ಭಾಗದಲ್ಲಿ 41 ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 100 ಪಿಯು ಕಾಲೇಜು, ಒಂದು ಮಹಿಳಾ ಪದವಿ ಕಾಲೇಜು ಸ್ಥಾಪಿಸುವ ಭರವಸೆ ಹಾಗೆ ಉಳಿದಿದೆ ಎಂದು ಹೇಳಿದರು.
ವಿಚಾರಣೆಗೆ ಮೊದಲೇ ‘ಕ್ಲೀನ್‌ಚಿಟ್’:
ನಾಗಮಂಗಲ ಪ್ರಕರಣದಲ್ಲಿ ವಿಚಾರಣೆ ನಡೆಸುವ ಮೊದಲೇ ತಪ್ಪಿತಸ್ಥರಿಗೆ ಕ್ಲೀನ್‌ಚಿಟ್ ನೀಡಲಾಗುತ್ತಿದೆ. ಮೊದಲು ತನಿಖೆ ನಡೆಸಿ, ನಂತರ ತಪ್ಪಿತಸ್ಥರು ಯಾರೆಂದು ತೀರ್ಮಾನಿಸಬೇಕು ಎಂದು ಆಗ್ರಹಿಸಿದರು.
ಒಕ್ಕಲಿಗ ಸಮುದಾಯದ ನಾಯಕ ಎಚ್.ಡಿ. ದೇವೇಗೌಡರ ಗೌರವ ಹಾಳು ಮಾಡಲು ಕಾಂಗ್ರೆಸ್ ನಾಯಕರು ಯತ್ನಿಸಿದ್ದಾರೆ. ಒಕ್ಕಲಿಗರ ಮೇಲೆ ಒಲವಿದ್ದರೆ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿ, ಒಕ್ಕಲಿಗರನ್ನೇ ಮುಖ್ಯಮಂತ್ರಿ ಮಾಡಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಅಪರಾಧಿಗಳ ತಾಣ: ಶೋಭಾ ಕರ್ನಾಟಕ ಅಪರಾಧಿಗಳ ತಾಣವಾಗುತ್ತಿದೆ. ದೇಶದ್ರೋಹಿಗಳೇ ಮೇಲುಗೈ ಸಾಧಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರಿದರು. ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು ‘ಅಪರಾಧ ಚಟುವಟಿಕೆಗಳು ವಿಜೃಂಭಿಸಲು ರಾಜ್ಯ ಸರ್ಕಾರದ ಓಲೈಕೆ ರಾಜಕೀಯ. ದೇಶದ್ರೋಹ ಮಾಡಿದರೂ ಅಡ್ಡಿ ಇಲ್ಲ ವೋಟ್ ಬ್ಯಾಂಕ್ ಬೇಕು ಎಂಬ ಮಾನಸಿಕ ನಡೆ ಇದಕ್ಕೆಲ್ಲ ಕಾರಣ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.