ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಹುಲ್‌ ವಿರುದ್ಧ ಪ್ರಕರಣ ಯಾವ ರಾಜಕಾರಣ: ಡಿ.ಕೆ. ಶಿವಕುಮಾರ್

Published 14 ಜೂನ್ 2024, 16:12 IST
Last Updated 14 ಜೂನ್ 2024, 16:12 IST
ಅಕ್ಷರ ಗಾತ್ರ

ಬೆಂಗಳೂರು: ಜಾಹೀರಾತು ವಿಚಾರದಲ್ಲಿ ರಾಹುಲ್‌ ಗಾಂಧಿ ಅವರ ವಿರುದ್ಧ ಸುಳ್ಳು ಕೇಸು ದಾಖಲಿಸಿರುವುದು ಯಾವ ರೀತಿಯ ರಾಜಕಾರಣ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದರು. 

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ರಾಹುಲ್ ಗಾಂಧಿ ಅವರು ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರಾದರು. ಅವರ ವಿರುದ್ಧ ಪ್ರಕರಣ ದಾಖಲಿಸುವುದು ಯಾವ ರಾಜಕಾರಣ? ಬಿಜೆಪಿಯ ವಿರುದ್ಧದ ಜಾಹೀರಾತಿಗೂ, ರಾಹುಲ್‌ಗೂ ಏನು ಸಂಬಂಧ? ಆ ಜಾಹೀರಾತು ಕೊಟ್ಟಿದ್ದು ರಾಹುಲ್ ಗಾಂಧಿ ಅವರಾ? ರಾಹುಲ್ ಗಾಂಧಿ ಎಐಸಿಸಿ ಅಥವಾ ಕೆಪಿಸಿಸಿ ಅಧ್ಯಕ್ಷರಾಗಿದ್ದಾರಾ? ದ್ವೇಷ ರಾಜಕಾರಣ ಮಾಡುತ್ತಿರುವುದು ಬಿಜೆಪಿ’ ಎಂದರು.

‘ಯಡಿಯೂರಪ್ಪ ಅವರ ವಿರುದ್ಧ ಕಾಂಗ್ರೆಸ್‌ ದ್ವೇಷದ ರಾಜಕಾರಣ ಮಾಡುತ್ತಿದೆ, ರಾಹುಲ್ ಗಾಂಧಿ ಅವರು ಬಂದ ನಂತರ ಈ ಬೆಳವಣಿಗೆ ನಡೆಯುತ್ತಿದೆ ಎಂಬ ಬಿಜೆಪಿ ಆರೋಪ ನಿರಾಧಾರ. ಕಾಂಗ್ರೆಸ್‌ ಯಾರ ಮೇಲೂ ದ್ವೇಷ ಮಾಡುವುದಿಲ್ಲ. ದ್ವೇಷ ರಾಜಕಾರಣದ ಬಗ್ಗೆ ಮಾತನಾಡಿದರೆ ವಿಚಾರ ಎಲ್ಲೆಲ್ಲೋ ಹೋಗುತ್ತದೆ. ಇಂತಹ ಕಠಿಣ ಪರಿಸ್ಥಿತಿಯನ್ನು ನಾವೂ ಅನುಭವಿಸಿದ್ದೇವೆ’ ಎಂದು ಹೇಳಿದರು.

‘ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹೇಳಿಕೆ ಹಾಗೂ ಮಾಧ್ಯಮಗಳ ವರದಿ ಆಧರಿಸಿ ಕೆಪಿಸಿಸಿ ಜಾಹೀರಾತು ಕೊಟ್ಟಿತ್ತು. ಪ್ರಕರಣ ದಾಖಲಿಸುವಾಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸಾಮಾನ್ಯ ಪ್ರಜ್ಞೆ ಇರಲಿಲ್ಲವೇ?’ ಎಂದರು.

‘ರಾಜಕಾರಣದಲ್ಲಿ ಸೋಲು–ಗೆಲುವು ಸಹಜ. ಅದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ತರಲು ಎಲ್ಲರೂ ಒಟ್ಟಾಗಿ ದುಡಿಯುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಟ ದರ್ಶನ್‌ ಪ್ರಕರಣದಲ್ಲಿ ಯಾವುದೇ ಒತ್ತಡವಿಲ್ಲ. ಜನರು ಹಾಗೂ ಮಾಧ್ಯಮಗಳ ಮಧ್ಯೆ ಪೊಲೀಸರಿಗೆ ಸ್ವತಂತ್ರವಾಗಿ ವಿಚಾರಣೆ ನಡೆಸಲು ಆಗುತ್ತಿಲ್ಲ. ಹಾಗಾಗಿ, ಶಾಮಿಯಾನ ಹಾಕಿಕೊಂಡಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT