ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಕೈಗೆತ್ತಿಕೊಂಡು ಆಸ್ತಿಪಾಸ್ತಿಗೆ ಹಾನಿ ಸಹಿಸಲ್ಲ: ಡಿಕೆಶಿ

Published 28 ಡಿಸೆಂಬರ್ 2023, 9:18 IST
Last Updated 28 ಡಿಸೆಂಬರ್ 2023, 9:18 IST
ಅಕ್ಷರ ಗಾತ್ರ

ಬೆಂಗಳೂರು: ‘ಕನ್ನಡಪರ ಹೋರಾಟಗಾರರು ಆಸ್ತಿ-ಪಾಸ್ತಿಗೆ ಹಾನಿ ಮಾಡಿದರೆ ಕಣ್ಣುಮುಚ್ಚಿಕೊಂಡು ಕುಳಿತುಕೊಳ್ಳಲು ಸಾಧ್ಯವಿಲ್ಲ. ಯಾರೊಬ್ಬರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು. 

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಕನ್ನಡ ಉಳಿಸಿ, ಬೆಳೆಸುವ ಹೋರಾಟಕ್ಕೆ ಅಭ್ಯಂತರವಿಲ್ಲ. ಆದರೆ, ಹೋರಾಟದ ಹೆಸರಿನಲ್ಲಿ ಆಸ್ತಿಪಾಸ್ತಿ ಹಾನಿ ಮಾಡುವುದನ್ನು ನಾವು ಒಪ್ಪುವುದಿಲ್ಲ, ಸಹಿಸುವುದೂ ಇಲ್ಲ. ಇದರಿಂದ ಕರ್ನಾಟಕದ ಗೌರವ, ಘನತೆಗೆ ಧಕ್ಕೆಯಾಗುತ್ತದೆ’ ಎಂದರು.

‘ಕಾನೂನು ಪಾಲನೆ ಎಲ್ಲರ ಕರ್ತವ್ಯ. ಶೇ 60ರಷ್ಟು ನಾಮಫಲಕ ಕನ್ನಡದಲ್ಲಿರಬೇಕು ಎನ್ನುವುದನ್ನು ಕೇಳಲು ಇತಿಮಿತಿ ಇದೆ. ಈ ಹಿಂದೆ ಯಾರೋ ಒಬ್ಬರು ದೂರು ನೀಡಿದರು ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡರ ಮೇಲೆ ಪ್ರಕರಣ ದಾಖಲಾದಾಗ, ಅವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳ ಜತೆ ನಾನೇ ಮಾತನಾಡಿದ್ದೆ. ಕನ್ನಡ ಕಡ್ಡಾಯ ಮಾಡಲು ನೋಟಿಸ್‌ ನೀಡೋಣ. ಆದರೆ, ಕಾನೂನು ಕೈಗೆತ್ತಿಕೊಳ್ಳಬಾರದು. ನಾರಾಯಣಗೌಡರಿಗೆ ಈ ಮಾತನ್ನು ಇವತ್ತೂ ಹೇಳುತ್ತೇನೆ, ಮುಂದೆಯೂ ಹೇಳುತ್ತೇನೆ’ ಎಂದರು.

‘ಪ್ರತಿಭಟನೆ ಮಾಡಲಿ, ಧಿಕ್ಕಾರ ಕೂಗಲಿ. ನಾವು ತಪ್ಪು ಮಾಡಿದರೆ ನಮ್ಮ ಮನೆ ಮುಂದೆಯೂ ಬಂದು ಪ್ರತಿಭಟನೆ ಮಾಡಲಿ. ನಾವೂ ಕನ್ನಡಿಗರೇ. ಕನ್ನಡದ ಬಗ್ಗೆ ನಮಗೂ ಬದ್ಧತೆ ಇದೆ. ಸಚಿವ ಸಂಪುಟಕ್ಕೆ ಟಿಪ್ಪಣಿಗಳು ಕನ್ನಡದಲ್ಲೇ ಇರಬೇಕು ಎಂದು ಸಚಿವರುಗಳಿಗೆ ಮುಖ್ಯಮಂತ್ರಿ ಸ್ಪಷ್ಟವಾಗಿ ಹೇಳಿದ್ದಾರೆ. ಕನ್ನಡ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ’ ಎಂದರು. 

‘ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪಾಠ ಕಲಿಸುತ್ತೇವೆ’ ಎಂದು ನಾರಾಯಣ ಗೌಡರ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್‌, ‘ನಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಕನ್ನಡಪರ ಹೋರಾಟಗಾರರ ಸಹಕಾರ ಇಲ್ಲ ಎಂದು ನಾನು ಹೇಳುವುದಿಲ್ಲ. ಹಾಗೆಂದು ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ. ಅನೇಕರು ಇಲ್ಲಿ ಬಂದು ಬಂಡವಾಳ ಹೂಡಿಕೆ ಮಾಡಿದ್ದಾರೆ. ಹೊರಗಡೆಯಿಂದ ಬಂದವರು ಇಲ್ಲಿ ಬದುಕುತ್ತಿದ್ದಾರೆ. ಅವರಿಗೆ ಕನ್ನಡ ಬಳಕೆ ಬಗ್ಗೆ ಹೇಳೋಣ. ಹಾಗೆಂದು ಅವರನ್ನು ಬೆದರಿಸಲು ಅವಕಾಶ ಇಲ್ಲ’ ಎಂದು ಸ್ಪಷ್ಟವಾಗಿ ಹೇಳಿದರು.

‘ಎಲ್ಲ ವ್ಯಾಪಾರಿಗಳು ಸರ್ಕಾರದ ಆದೇಶ ಪಾಲಿಸಬೇಕು. ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯವಾಗಿ ಬಳಸಬೇಕು. ಕನ್ನಡ ನಾಮಫಲಕ ಅಳವಡಿಸದವರಿಗೆ ನೊಟೀಸ್ ನೀಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT