ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪರಿಹಾರ ಬಿಡುಗಡೆಗೆ ಸಮ್ಮತಿ: ಸು‍ಪ್ರಿಂ ಕೋರ್ಟ್‌ಗೆ CM ಸಿದ್ದರಾಮಯ್ಯ ಧನ್ಯವಾದ

Published 22 ಏಪ್ರಿಲ್ 2024, 10:13 IST
Last Updated 22 ಏಪ್ರಿಲ್ 2024, 10:13 IST
ಅಕ್ಷರ ಗಾತ್ರ

ಬೆಂಗಳೂರು: ಬರ ಪರಿಹಾರ ಬಿಡುಗಡೆ ವಿಷಯದಲ್ಲಿ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಭರವಸೆ ನೀಡಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬರ ಪರಿಹಾರ ವಿಳಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಸ್ಥಿಕೆಗೆ ಧನ್ಯವಾದ ಹೇಳಿದ್ದಾರೆ.

2023ರ ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾಗಿದ್ದ ನಮ್ಮ ಮನವಿ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳದ ಕಾರಣ ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇದೊಂದು ಮೈಲಿಗಲ್ಲು. ನ್ಯಾಯ ರಕ್ಷಣೆ ಹಾಗೂ ರಾಜ್ಯದ ಜನರ ಬರ ಪರಿಹಾರಕ್ಕಾಗಿ ನಡೆಸಿದ ಸುಧೀರ್ಘ ಹೋರಾಟಕ್ಕೆ ಯಶಸ್ಸು ಸಿಕ್ಕಿದೆ ಎಂದು ಪೋಸ್ಟ್‌ ಮಾಡಿದ್ದಾರೆ.

ಕರ್ನಾಟಕ್ಕಕೆ ಬರ ಪರಿಹಾರ ಬಿಡುಗಡೆ ಮಾಡಲು ಚುನಾವಣಾ ಆಯೋಗ ಒಪ್ಪಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಇದು ಮೊದಲ ಹಂತದ ಜಯ–ಕಾಂಗ್ರೆಸ್‌

ಬರ ಪರಿಹಾರದ ವಿಚಾರವಾಗಿ ಸುಪ್ರೀಂ ಕೋರ್ಟಿನಲ್ಲಿ ಕರ್ನಾಟಕಕ್ಕೆ ಮೊದಲ ಹಂತದ ಜಯ ಸಿಕ್ಕಿದೆ ಎಂದು ರಾಜ್ಯ ಕಾಂಗ್ರೆಸ್‌ ಘಟಕ ಪ್ರತಿಕ್ರಿಯಿಸಿದೆ.

ಒಂದು ವಾರದೊಳಗೆ ಕರ್ನಾಟಕಕ್ಕೆ ಬರ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನಕ್ಕೆ ಕೇಂದ್ರ ಸರ್ಕಾರ ಒಪ್ಪಿದೆ. ಚುನಾವಣಾ ಭಾಷಣದಲ್ಲಿ ಸುಳ್ಳು ಹೇಳುವ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಬಾಲ ಮುದುರಿ ಒಪ್ಪಿಕೊಂಡಿದೆ. ಕನ್ನಡಿಗರ ಹಿತ ಕಾಯುವ ದೃಷ್ಟಿಯಿಂದ ಕೋರ್ಟ್ ಮೆಟ್ಟಿಲೇರುವ ಕರ್ನಾಟಕ ಸರ್ಕಾರದ ದಿಟ್ಟ ನಿರ್ಧಾರದಿಂದ ಕನ್ನಡದ ರೈತರಲ್ಲಿ ಆಶಾಭಾವನೆ ಮೂಡುವಂತಾಗಿದೆ ಎಂದಿದೆ.

ಈ ಹೋರಾಟದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜೊತೆ ಕೈಜೋಡಿಸಿ ಬೆಂಬಲವಾಗಿ ನಿಂತ ರಾಜ್ಯದ ರೈತರು ಹಾಗೂ ಪ್ರಜ್ಞಾವಂತ ಜನತೆಗೆ ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT