ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 2,000ಕ್ಕೂ ಅಧಿಕ ವಿಶೇಷ ಬಸ್

Published 14 ಅಕ್ಟೋಬರ್ 2023, 15:46 IST
Last Updated 14 ಅಕ್ಟೋಬರ್ 2023, 15:46 IST
ಅಕ್ಷರ ಗಾತ್ರ

ಬೆಂಗಳೂರು: ದಸರಾ ಮಹೋತ್ಸವ ಮತ್ತು ಶಾಲಾ, ಕಾಲೇಜುಗಳಿಗೆ ರಜೆ ಇರುವುದರಿಂದ ಪ್ರವಾಸ ಹೋಗುವವರ ಸಂಖ್ಯೆ ಹೆಚ್ಚಾಗುವುದರಿಂದ ಕೆಎಸ್‌ಆರ್‌ಟಿಸಿ 2000ಕ್ಕೂ ಅಧಿಕ ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ. ಅ.20ರಿಂದ 29ರವರೆಗೆ ಈ ವಿಶೇಷ ಸಾರಿಗೆ ಇರಲಿದೆ.

ಕರ್ನಾಟಕ ಸಾರಿಗೆ (ವೇಗದೂತ), ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಇ.ವಿ ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‌ಗಳ ಸಂಚಾರ ಇರಲಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್‌ ತಿಳಿಸಿದ್ದಾರೆ.

ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಬಸ್‌ಗಳು ಹೊರಡಲಿವೆ. ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪುಣೆ, ಎರ್ನಾಕುಲಂ, ಪಾಲ್‌ಘಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಇರಲಿದೆ.

ದಸರಾಕ್ಕೆ 600 ವಿಶೇಷ ಬಸ್‌

ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 250 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಇರಲಿದೆ. ಇದಲ್ಲದೇ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್.ಅಣೆಕಟ್ಟು/ಬೃಂದಾವನ ಉದ್ಯಾನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 350 ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ 600 ದಸರಾ ವಿಶೇಷ ವಾಹನಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ‘ಫ್ಲೈ ಬಸ್’ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. www.ksrtc.karnataka.gov.in ವೆಬ್ ಸೈಟ್ ಅಥವಾ ಮೊಬೈಲ್ ಮೂಲಕ ಇ-ಟಿಕೆಟ್ ಬುಕಿಂಗ್‍ ಮಾಡಬಹುದು. ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ‘ಮಾಹಿತಿ ಕೇಂದ್ರ’ ವನ್ನು ಪ್ರತ್ಯೇಕವಾಗಿ ತೆರೆಯಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT