ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡಿಕೆಶಿ ವಿರುದ್ಧ ED ಪ್ರಕರಣ ರದ್ದು: ಪ್ರಕರಣ ಸಾಗಿದ ಹಾದಿ ಹೀಗಿತ್ತು...

Published 5 ಮಾರ್ಚ್ 2024, 13:04 IST
Last Updated 5 ಮಾರ್ಚ್ 2024, 13:07 IST
ಅಕ್ಷರ ಗಾತ್ರ

ನವದೆಹಲಿ: ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನೂ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದೇ ಪ್ರಕರಣದಲ್ಲಿ ಸುಮಾರು 33 ದಿನಗಳ ಸೆರೆವಾಸವನ್ನು ಶಿವಕುಮಾರ್ ಅನುಭವಿಸಿದ್ದರು.

2017ರ ಆಗಸ್ಟ್‌ನಲ್ಲಿ ದಿಲ್ಲಿಯಲ್ಲಿರುವ ಅವರ ಫ್ಲಾಟ್‌ಗಳಲ್ಲಿ ಲೆಕ್ಕಕ್ಕೆ ಸಿಗದ ಹಣ ಸಿಕ್ಕಿತ್ತು. ಈ ಹಿನ್ನೆಲೆ ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರ್‌ ವಿರುದ್ಧ ಐಪಿಸಿ ಸೆಕ್ಷನ್‌ 120 B ಅಡಿಯಲ್ಲಿ 2018ರಲ್ಲಿ ಪ್ರಕರಣವನ್ನು ದಾಖಲಿಸಿತ್ತು. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಸೂರ್ಯಕಾಂತ್‌ ಅವರಿದ್ದ ಪೀಠವು 2018ರಲ್ಲಿ ಡಿ.ಕೆ.ಶಿವಕುಮಾರ್‌ ವಿರುದ್ಧ ದಾಖಲಾಗಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ರದ್ದುಗೊಳಿಸಿದೆ. 

2017ರಲ್ಲಿ ಶಿವಕುಮಾರ್‌ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ನಡೆಸಿದ್ದರು. ಆಗ, ದೆಹಲಿಯ ವಿವಿಧ ಸ್ಥಳಗಳಲ್ಲಿ ₹ 8.59 ಕೋಟಿ ನಗದು ವಶಕ್ಕೆ ಪಡೆಯಲಾಗಿತ್ತು. ಬಳಿಕ ಶಿವಕುಮಾರ್‌ ಅವರನ್ನು ಬಂಧಿಸಲಾಯಿತು. ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಿತ್ತು. ಎಲ್ಲ ಆರೋಪಿಗಳಿಗೆ ದೆಹಲಿ ಹೈಕೋರ್ಟ್‌ ಈ ಹಿಂದೆ ಮಧ್ಯಂತರ ಜಾಮೀನು ನೀಡಿತ್ತು.

ಶಿವಕುಮಾರ್‌, ಅವರ ನಿಕಟವರ್ತಿಗಳಾದ ಉದ್ಯಮಿ ಸಚಿನ್‌ ನಾರಾಯಣ್‌, ಎಸ್.ಕೆ. ಶರ್ಮಾ ಟ್ರಾನ್ಸ್‌ಪೋರ್ಟ್‌ ಮಾಲೀಕ ಸುನೀಲ್‌ ಕುಮಾರ್‌ ಶರ್ಮಾ, ದೆಹಲಿಯ ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ಎನ್‌. ವಿರುದ್ಧ ವಿಚಾರಣೆ ಆರಂಭಿಸುವಂತೆ ಕೋರಿ ಚುನಾಯಿತ ಪ್ರತಿನಿಧಿಗಳ ಪ್ರಕರಣಗಳ ವಿಶೇಷ ನ್ಯಾಯಾಲಯದಲ್ಲಿ ಇ.ಡಿ. ಅಧಿಕಾರಿಗಳು ಆರೋಪ ಪಟ್ಟಿ ಸಲ್ಲಿಸಿದ್ದರು.

2017ರ ಆ. 29: ಸಮನ್ಸ್‌ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಕರ್ನಾಟಕ ಹೈಕೋರ್ಟ್‌

ಶಿವಕುಮಾರ್‌, ದೆಹಲಿ ಕರ್ನಾಟಕ ಭವನದ ಅಧಿಕಾರಿ ಹನುಮಂತಯ್ಯ ಮತ್ತು ಇತರರ ವಿರುದ್ಧ ಕಳೆದ ಸೆಪ್ಟೆಂಬರ್‌ನಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಇ.ಡಿ. ದಾಖಲಿಸಿಕೊಂಡಿತ್ತು. ತನಿಖೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್‌ ಜಾರಿ ಮಾಡಲಾಗಿತ್ತು. ಆದರೆ, ಈ ಸಮನ್ಸ್‌ ರದ್ದು ಮಾಡುವಂತೆ ಕೋರಿ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಆಗಸ್ಟ್‌ 29ರಂದು ಹೈಕೋರ್ಟ್‌ ವಜಾ ಮಾಡಿತ್ತು. ತಮಗೆ ಅಡಗಿಸಿಡಲು ಏನೂ ಇಲ್ಲ ಎಂದು ಹೇಳಿಕೊಂಡಿದ್ದ ಶಿವಕುಮಾರ್‌ ಇ.ಡಿ ಮುಂದೆ ತನಿಖೆಗೆ ಶುಕ್ರವಾರ ಹಾಜರಾಗಿದ್ದರು. ಆದರೆ, ಗೌರಿ–ಗಣೇಶ ಹಬ್ಬದ ದಿನವಾದ ಸೋಮವಾರ ತಮಗೆ ವಿಚಾರಣೆಯಿಂದ ವಿನಾಯಿತಿ ನೀಡಬೇಕು ಎಂದು ಅವರು ಮಾಡಿದ ಮನವಿಯನ್ನು ಇ.ಡಿ. ಗಣನೆಗೆ ತೆಗೆದುಕೊಂಡಿರಲಿಲ್ಲ.

  • ಆ. 29: ವಿಚಾರಣೆಗೆ ಹಾಜರಾಗುವಂತೆ ಶಿವಕುಮಾರ್‌ಗೆ ಇ.ಡಿ. ಸಮನ್ಸ್‌

  • ಆ. 30: ವಿಚಾರಣೆಗೆ ಹಾಜರಾದಾಗ ಬಂಧನದಿಂದ ರಕ್ಷಣೆ ನೀಡಬೇಕು ಎಂದು ಸಲ್ಲಿಸಿದ್ದ ಅರ್ಜಿ ವಜಾ

  • ಆ.30: ದೆಹಲಿಯ ಇ.ಡಿ. ಕಚೇರಿಯಲ್ಲಿ ವಿಚಾರಣೆ ಆರಂಭ, ಸತತ ನಾಲ್ಕು ದಿನ ವಿಚಾರಣೆ ಮುಂದುವರಿಕೆ

  • ಸೆ. 3: ಇ.ಡಿಯಿಂದ ಬಂಧನಕ್ಕೆ ಒಳಗಾದ ಶಿವಕುಮಾರ್

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದೆಹಲಿಯಲ್ಲಿ ವಶಪಡಿಸಿಕೊಂಡ ₹ 8.60 ಕೋಟಿ ಅಕ್ರಮ ಹಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಸಮನ್ಸ್‌ ರದ್ದುಗೊಳಿಸಬೇಕು’ ಎಂದು ಕೋರಿದ್ದ ಮನವಿಯನ್ನು ಹೈಕೋರ್ಟ್‌ 2019ರಲ್ಲಿ ವಜಾಗೊಳಿಸಿತ್ತು.

ಶಿವಕುಮಾರ್ ಮನೆಗೆ ಬಂದಿದ್ದ ನಾಲ್ವರು ಇ.ಡಿ. ಅಧಿಕಾರಿಗಳು ಮರುದಿನ ಬೆಳಿಗ್ಗೆ ಬೆಳಿಗ್ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದರು. ನಂತರ ಶಿವಕುಮಾರ್ ಬಂಧನವಾಯಿತು. 2019 ಸೆಪ್ಟೆಂಬರ್‌ನಿಂದ 33 ದಿನ ಜೈಲಿನಲ್ಲಿದ್ದರು.

ಜಾರಿ ನಿರ್ದೇಶನಾಲಯವು ಡಿ.ಕೆ.ಶಿವಕುಮಾರ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದರ ವಿಚಾರಣಾ ಪ್ರಕ್ರಿಯೆಯೂ ಆರಂಭವಾಗಿತ್ತು. ಜತೆಗೆ ಶಿವಕುಮಾರ್‌ಗೆ ಜಾಮೀನು ಸಹ ಮಂಜೂರಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT