ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಹಾಗೂ ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸೋಮವಾರ ಅಧಿಸೂಚನೆ ಹೊರಡಿಸಿದೆ.
ಮೇ 19ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 29 ಕೊನೆಯ ದಿನಾಂಕ. ಮೇ 23ಕ್ಕೆ ಮತ ಎಣಿಕೆ ನಡೆಯಲಿದೆ.
ಚಿಂಚೋಳಿ ಕ್ಷೇತ್ರದ ಡಾ.ಉಮೇಶ ಜಾಧವ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಗುಲ್ಬರ್ಗಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಕುಂದಗೋಳ ಶಾಸಕರೂ ಆಗಿದ್ದ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಈ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ವಾರಾಂತ್ಯದೊಳಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಪ್ರಕಟಿಸಲಿದ್ದಾರೆ.