ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, ಹಲವು ಹಂತಗಳಲ್ಲಿ ಪೂರ್ವ ಪರೀಕ್ಷಾರ್ಥ ಪ್ರಯೋಗಗಳು ಯಶಸ್ವಿಯಾಗಿವೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಪಶ್ಚಿಮಘಟ್ಟದದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳಗಳಿಂದ ಮುಂಗಾರು ಮಳೆ ಅವಧಿಯಲ್ಲಿ (139 ದಿನಗಳು) 24.01 ಟಿಎಂಸಿ ಅಡಿ ನೀರನ್ನು ಬಳಸಿಕೊಳ್ಳಲಾಗುತ್ತದೆ. ಈ ಯೋಜನೆ ಅನುಷ್ಠಾನದಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಹಾಗೂ ಅಲ್ಲಿನ ಜಾನುವಾರುಗಳಿಗೆ ಒಟ್ಟು 14.056 ಟಿಎಂಸಿ ಅಡಿ ಕುಡಿಯುವ ನೀರು ಒದಗಿಸಲಾಗುವುದು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ತುಮಕೂರು ವ್ಯಾಪ್ತಿಯ 527 ಕೆರೆಗಳಿಗೆ 9.953 ಟಿಎಂಸಿ ಅಡಿ ನೀರನ್ನು ಕೆರೆಗಳಿಗೆ ತುಂಬಿಸಲಾಗುವುದು ಎಂದರು.