ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ಜಾತಿ ಪ್ರಮಾಣ ಪತ್ರ: ತನಿಖೆಗೆ ಹೈಕೋರ್ಟ್‌ ಆದೇಶ

Published 22 ಮಾರ್ಚ್ 2024, 0:23 IST
Last Updated 22 ಮಾರ್ಚ್ 2024, 0:23 IST
ಅಕ್ಷರ ಗಾತ್ರ

ಬೆಂಗಳೂರು: ‘ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ; ಪ್ರವರ್ಗ ಒಂದರಲ್ಲಿ ಬರುವ ಬೆಸ್ತರ ಉಪ ಜಾತಿಯಾದ ಪರಿವಾರ ಹಾಗೂ ತಳವಾರ ಬೋಯಿ ಉಪ ಪಂಗಡದವರಿಗೂ ಪರಿಶಿಷ್ಟ ಪಂಗಡದ (ಎಸ್‌ಟಿ) ನಕಲಿ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರವು ನಕಲಿ ಜಾತಿ ಪ್ರಮಾಣ ಪತ್ರ ಪಡೆದವರಿಗೆ ಇದೇ 27ರೊಳಗೆ ನೋಟಿಸ್ ನೀಡಿ ಶೀಘ್ರ ಕ್ರಮ ಜರುಗಿಸಬೇಕು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತಂತೆ ಯಾದಗಿರಿ ಜಿಲ್ಲೆಯ, ‘ರಾಜ್ಯ ಎಸ್‌ಸಿ–ಎಸ್‌ಟಿ ನಕಲಿ ಜಾತಿ ಪ್ರಮಾಣ ಪತ್ರಗಳ ತಡೆ ಸಮಿತಿ’ ಪ್ರಧಾನ ಕಾರ್ಯದರ್ಶಿ ಮಾರಪ್ಪ ನಾಯಕ ಸೇರಿದಂತೆ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ರವಿವರ್ಮ ಕುಮಾರ್, ‘ಪ್ರವರ್ಗ ಒಂದರಲ್ಲಿ ಬರುವ ಬೆಸ್ತರ ಉಪ ಜಾತಿಯಾದ ಪರಿವಾರ ಹಾಗೂ ತಳವಾರ ಬೋಯಿ ಉಪ ಪಂಗಡದವರಿಗೂ ಎಸ್‌ಟಿ ಜಾತಿ ಪ್ರಮಾಣ ಪತ್ರಗಳನ್ನು ಅಧಿಕಾರಿಗಳು ವಿತರಿಸುತ್ತಿದ್ದಾರೆ. ಈ ರೀತಿ 60ಕ್ಕೂ ಹೆಚ್ಚು ನಕಲಿ ಜಾತಿ ಪ್ರಮಾಣಪತ್ರಗಳ ವಿವರಗಳನ್ನು ಅರ್ಜಿಯಲ್ಲಿ ಅಡಕ ಮಾಡಲಾಗಿದೆ’ ಎಂದು ವಿವರಿಸಿದರು.

‘ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದವರು ಶೈಕ್ಷಣಿಕ, ಔದ್ಯೋಗಿಕ ಲಾಭ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲದೆ, ಚುನಾವಣೆಗಳಲ್ಲಿ ಸ್ಪರ್ಧಿಸುವ ಮುಖೇನ ಎಸ್‌ಟಿಗಳಿಗೆ ಲಭ್ಯವಿರುವ ಎಲ್ಲಾ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಇದರಿಂದ ಮೀಸಲಿಗೆ ಅರ್ಹರಾದವರು ಸರ್ಕಾರಿ ಸೌಲಭ್ಯಗಳಿಂದ ವಂಚಿತವಾಗುತ್ತಿದ್ದಾರೆ ಮಾತ್ರವಲ್ಲ, ಇದು ಸಾಮಾಜಿಕ ನ್ಯಾಯ ಬುಡಮೇಲಾಗುವಂತೆ ಮಾಡಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಿಶೇಷ ವಕೀಲ ಸಿ.ಜಗದೀಶ್, ‘ಅರ್ಜಿದಾರರು ನಕಲಿ ಜಾತಿ ಪ್ರಮಾಣ ಪತ್ರದ ಬಗ್ಗೆ ದೂರು ನೀಡಿದ್ದರೆ ಆ ಬಗ್ಗೆ ಪರಿಶೀಲಿಸಿ ಅಯಾ ಜಿಲ್ಲಾಕಾರಿಗಳು ಕ್ರಮ ಕೈಗೊಳ್ಳುತ್ತಿದ್ದರು. ಆದರೆ ಅರ್ಜಿದಾರರು ದೂರು ನೀಡಿಲ್ಲ’ ಎಂದು ಬಲವಾಗಿ ಆಕ್ಷೇಪಿಸಿದರು.

‘ಸದ್ಯ ಚುನಾವಣೆ ನಡೆಯುತ್ತಿರುವುದರಿಂದ ಜಿಲ್ಲಾಧಿಕಾರಿಗಳು ಕೆಲಸದ ಒತ್ತಡದಲ್ಲಿದ್ದಾರೆ. ಆದರೂ ಕೋರ್ಟ್ ನಿರ್ದೇಶನದ ಅನುಸಾರ ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದಾರೆ ಎಂದು ಆರೋಪಿಸಲಾದವರಿಗೆ ನೋಟಿಸ್ ನೀಡಿ, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಒಂದಷ್ಟು ಕಾಲಾವಕಾಶ ನೀಡಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಅರ್ಜಿದಾರರು ಗಂಭೀರವಾದ ವಿಷಯವೊಂದನ್ನು ನ್ಯಾಯಪೀಠದ ಮುಂದಿಟ್ಟಿದ್ದಾರೆ. ಹೀಗಾಗಿ, ಸಾರ್ವಜನಿಕರ ಹಿತಾಸಕ್ತಿ ರಕ್ಷಿಸುವ ಹೊಣೆ ಹೊತ್ತ ಸರ್ಕಾರವು ಅರ್ಜಿದಾರರು ಆರೋಪಿಸಿರುವಂತೆ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದವರಿಗೆ ನೋಟಿಸ್ ನೀಡಬೇಕು. ಸೂಕ್ತ ತನಿಖೆ ನಡೆಸಿ, ಕಾನೂನು ಕ್ರಮ ಜರುಗಿಸಬೇಕು. ಈ ಕುರಿತ ವರದಿಯನ್ನು ಮುಂದಿನ ವಿಚಾರಣೆ ವೇಳೆಗೆ ಕೋರ್ಟ್‌ಗೆ ಸಲ್ಲಿಸಬೇಕು’ ಎಂದು ಆದೇಶಿಸಿ ವಿಚಾರಣೆಯನ್ನು ಏಪ್ರಿಲ್‌ 2ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT