ಬೆಂಗಳೂರು: ‘ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್ಎಲ್) ವರದಿಯಲ್ಲಿ ಗಾಂಜಾ ಸೇವನೆಯಾಗಿಲ್ಲ ಎಂಬುದು ಸ್ಪಷ್ಟವಾಗಿದ್ದರೂ ಅದಕ್ಕೆ ತದ್ವಿರುದ್ಧವಾಗಿ ಗಾಂಜಾ ಸೇವನೆ ದೃಢಪಟ್ಟಿದೆ ಎಂಬ ದೋಷಾರೋಪ ಪಟ್ಟಿ ಸಲ್ಲಿಸುವ ಮೂಲಕ ಇಬ್ಬರು ಯುವಕರನ್ನು ಕಾನೂನು ಸಂಕಷ್ಟಕ್ಕೆ ದೂಡಲಾಗಿದೆ’ ಎಂದು ಸಂಬಂಧಿಸಿದ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಲು ಹೈಕೋರ್ಟ್ ಆದೇಶಿಸಿದೆ.
‘ಗಾಂಜಾ ಸೇವನೆ ಆರೋಪದಡಿ ನಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ವರ್ತೂರು ವ್ಯಾಪ್ತಿಯ ಹನುಮಂತ (25) ಮತ್ತು ಮಂಜುನಾಥ್ (29) ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದೆ.
‘ಅರ್ಜಿದಾರರಿಂದ 15 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಾಸಿಕ್ಯೂಷನ್ ಹೇಳಿದೆ. ಆದರೆ, ವಶಪಡಿಸಿಕೊಂಡಿರುವ ಗಾಂಜಾ ಎಲ್ಲಿದೆ, ಏನಾಯಿತು ಎನ್ನುವುದು ನಿಗೂಢವಾಗಿದೆ. ಒಮ್ಮೆ ಮಾದಕ ವಸ್ತುವನ್ನು ವಶಪಡಿಸಿಕೊಂಡರೆ, ಅದರ ಪಂಚನಾಮೆ, ದಾಸ್ತಾನು ಮಾಡಬೇಕು. ಮಾದರಿಯನ್ನು ಎಫ್‌ಎಸ್‌ಎಲ್ ಪರೀಕ್ಷೆಗೆ ಕಳುಹಿಸಬೇಕು. ಪ್ರಕರಣದಲ್ಲಿ 15 ಗ್ರಾಂ ಪಂಚನಾಮೆ ಮಾಡಲಾಗಿದೆ ಎಂಬುದನ್ನು ನಂಬಲು ಆಗದು. ಅರ್ಜಿದಾರರು (ಪ್ರಕರಣ ದಾಖಲಾದಾಗ ವಿದ್ಯಾರ್ಥಿಗಳು) ಗಾಂಜಾ ಸೇವನೆ ಮಾಡಿದ್ದರು ಎನ್ನುವುದೂ ಸಮರ್ಥನೀಯವಲ್ಲ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
‘ಅರ್ಜಿದಾರರನ್ನು 2019ರಲ್ಲಿ ಸುಳ್ಳು ಪ್ರಕರಣದಲ್ಲಿ ಸಿಲುಕಿಸಿ ವಿಚಾರಣ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವರ್ತೂರು ಪೊಲೀಸ್ ಠಾಣೆಯ ಅಂದಿನ ಇನ್‌ಸ್ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ವಿರುದ್ಧ ಇಲಾಖಾ ವಿಚಾರಣೆ ನಡೆಸಬೇಕು ಹಾಗೂ ಈ ಸಂಬಂಧ ಕೈಗೊಳ್ಳಲಾದ ಕ್ರಮಗಳ ಕುರಿತು 12 ವಾರಗಳಲ್ಲಿ ವರದಿ ಸಲ್ಲಿಸಬೇಕ’ ಎಂದು ನ್ಯಾಯಪೀಠ ಆದೇಶಿಸಿದೆ.
ಅಂತೆಯೇ, ಅರ್ಜಿದಾರರ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎರಡನೇ ಎಸಿಎಂಎಂ ನ್ಯಾಯಾಲಯದಲ್ಲಿ ಬಾಕಿಯಿದ್ದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಯನ್ನೂ ರದ್ದುಪಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.