ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಳು ಜಾಹೀರಾತು ಪ್ರಕರಣ: ಬೆಂಗಳೂರಿನ ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ನಾಳೆ ಹಾಜರು

Published 6 ಜೂನ್ 2024, 15:36 IST
Last Updated 6 ಜೂನ್ 2024, 15:36 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ (ಜೂನ್‌ 7) ಹಾಜರಾಗಲಿದ್ದಾರೆ. 

ಇದೇ ಮೊಕದ್ದಮೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನ್ಯಾಯಾಲಯ ಈಗಾಗಲೇ ಷರತ್ತುಬದ್ಧ ಜಾಮೀನು ನೀಡಿದೆ.

ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್‌. ಕೇಶವಪ್ರಸಾದ್‌ ಸಲ್ಲಿಸಿರುವ ಖಾಸಗಿ ದೂರನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ 42ನೇ ಎಸಿಎಂಎಂ ಕೋರ್ಟ್‌ ವಿಚಾರಣೆಗೆ ಅಂಗೀಕರಿಸಿ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಮೊದಲ ಆರೋಪಿ. ಎರಡನೇ ಆರೋಪಿ ಡಿ.ಕೆ. ಶಿವಕುಮಾರ್. ಮೂರನೇ ಆರೋಪಿ ಸಿದ್ದರಾಮಯ್ಯ, ನಾಲ್ಕನೇ ಆರೋಪಿ ರಾಹುಲ್ ಗಾಂಧಿ.

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಜೂನ್‌ 1ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗಿದ್ದರು. ರಾಹುಲ್‌ ಗಾಂಧಿ ಜೂನ್‌ 7 ಖುದ್ದು ಹಾಜರಾಗುವಂತೆ ನಿರ್ದೇಶಿಸಿ ನ್ಯಾಯಾಧೀಶರು ವಿಚಾರಣೆ ಮುಂದೂಡಿದ್ದರು.

‘ಶುಕ್ರವಾರ ಬೆಳಿಗ್ಗೆ ಬೆಂಗಳೂರಿಗೆ ಬರಲಿರುವ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ನ್ಯಾಯಾಲಯದ ಪ್ರಕ್ರಿಯೆ ಮುಗಿದ ಬಳಿಕ, ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ವಿಜೇತರಾದವರು ಹಾಗೂ ಪರಾಜಿತ ಅಭ್ಯರ್ಥಿಗಳ ಜತೆ ಕ್ವೀನ್ಸ್ ರಸ್ತೆಯಲ್ಲಿನ ‘ಭಾರತ್ ಜೋಡೊ’ ಭವನದಲ್ಲಿ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ರಾಹುಲ್‌ ದೆಹಲಿಗೆ ಮರಳಲಿದ್ದಾರೆ’ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT