ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ: ನಡ್ಡಾ, ವಿಜಯೇಂದ್ರ ವಿರುದ್ಧ FIR

ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ
Published 5 ಮೇ 2024, 16:03 IST
Last Updated 5 ಮೇ 2024, 16:03 IST
ಅಕ್ಷರ ಗಾತ್ರ

ಬೆಂಗಳೂರು: ಮೀಸಲಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿಯುಳ್ಳ ವಿಡಿಯೊ ತುಣುಕನ್ನು ಬಿಜೆಪಿ ರಾಜ್ಯ ಘಟಕದ ‘ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡು ದ್ವೇಷ ಸೃಷ್ಟಿಸಲು ಯತ್ನಿಸಿದ್ದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಘಟಕದ ಮುಖ್ತಸ್ಥ ಅಮಿತ್‌ ಮಾಳವೀಯ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳನ್ನು ಮೊಟ್ಟೆಗಳೆಂದು ಬಿಂಬಿಸಿ, ಆ ಮೊಟ್ಟೆಗಳಿರುವ ಬುಟ್ಟಿಗೆ ಮುಸ್ಲಿಂ ಮೊಟ್ಟೆಯನ್ನು ರಾಹುಲ್‌ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಂದಿರಿಸಿದ್ದಾರೆ. ಮರಿಯಾದ ಬಳಿಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಮರಿಗಳಿಗೆ ಸೇರಬೇಕಾದ ಅನುದಾನವನ್ನು ಮುಸ್ಲಿಂ ಮರಿಗಳಿಗೆ ಮಾತ್ರ ನೀಡುತ್ತಾರೆ...’ ಎಂಬ ಹೇಳಿಕೆಯಳ್ಳ ವಿಡಿಯೊ ತುಣುಕನ್ನು ಬಿಜೆಪಿ ರಾಜ್ಯ ಘಟಕದ ‘ಎಕ್ಸ್‌’ ಖಾತೆಯಲ್ಲಿ ಶನಿವಾರ ಹಂಚಿಕೊಳ್ಳಲಾಗಿತ್ತು.

ಈ ಕುರಿತು ಪೊಲೀಸ್‌ ಠಾಣೆಗೆ ದೂರು ನೀಡಿದ್ದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್‌ ಬಾಬು, ‘ಮಾಳವೀಯ, ನಡ್ಡಾ ಮತ್ತು ವಿಜಯೇಂದ್ರ ಇಂತಹ ವಿಡಿಯೊ ಪ್ರಸಾರದ ಮೂಲಕ ಸಮುದಾಯಗಳ ಮಧ್ಯೆ ದ್ವೇಷ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಇದು ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿದ್ದು, ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದ್ದರು.

ಪ್ರಜಾಪ್ರತಿನಿಧಿ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮೂವರ ವಿರುದ್ಧವೂ ಭಾನುವಾರ ಎಫ್‌ಐಆರ್‌ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT