ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಾವರಿ ಯೋಜನೆಗಳ ಅಡೆತಡೆ ನಿವಾರಣೆ: ಕೇಂದ್ರಕ್ಕೆ ಸರ್ವಪಕ್ಷ ನಿಯೋಗ– ಸಿದ್ದರಾಮಯ್ಯ

ಆಲಮಟ್ಟಿಯಲ್ಲಿ ಶನಿವಾರ ನಡೆದ ಬಾಗಲಕೋಟೆ, ವಿಜಯಪುರ ಅವಳಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ
Published 2 ಸೆಪ್ಟೆಂಬರ್ 2023, 13:03 IST
Last Updated 2 ಸೆಪ್ಟೆಂಬರ್ 2023, 13:03 IST
ಅಕ್ಷರ ಗಾತ್ರ

ವಿಜಯಪುರ: ರಾಜ್ಯದ ನನೆಗುದಿಗೆ ಬಿದ್ದಿರುವ ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣ ಮೇಲ್ದಂಡೆ ಯೋಜನೆ ಮೂರನೇ ಹಂತ, ಮೇಕೆದಾಟು, ಮಹಾದಾಯಿ ಯೋಜನೆಗಳ ಅನುಷ್ಠಾನಕ್ಕೆ ಇರುವ ಅಡತಡೆಗಳ‌ ನಿವಾರಣೆ ಸಂಬಂಧ ಒತ್ತಡ ಹೇರಲು ಸರ್ವಪಕ್ಷ ನಿಯೋಗವನ್ನು ಪ್ರಧಾನಿ ಹಾಗೂ ಕೇಂದ್ರ ಜಲ ಸಂಪನ್ಮೂಲ ಸಚಿವರ ಬಳಿಗೆ ಶೀಘ್ರ ಕೊಂಡೊಯ್ಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಆಲಮಟ್ಟಿಯಲ್ಲಿ ಶನಿವಾರ ನಡೆದ ಬಾಗಲಕೋಟೆ, ವಿಜಯಪುರ ಅವಳಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ಯವ ಸಂಬಂಧ ಈಗಾಗಲೇ ಪ್ರಧಾನಿ ಅವರಿಗೆ ಪತ್ರ ಬರೆಯಲಾಗಿದೆ. ಅವರು ಸಮಯ ನೀಡಿದ ತಕ್ಷಣ ನಿಯೋಗದೊಂದಿಗೆ ಭೇಟಿ ಮಾಡಲಾಗುವುದು ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ‌ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವಸತಿ ವಿಳಂಬ ಆಗಿರುವುದು ನಿಜ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ 2010ರಲ್ಲೇ ಕೃಷ್ಣಾ ನ್ಯಾಯಾಧೀಕರಣ ಅಂತಿಮ ತೀರ್ಪು ಬಂದಿದೆ. ಅದರೆ, ಈ ತೀರ್ಪು ಪ್ರಶ್ನಿಸಿ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ರಾಜ್ಯಗಳು ಸುಪ್ರೀಂ ಕೋರ್ಟ್ ನಲ್ಲಿ ಎಸ್ ಎಲ್ ಪಿ ಹಾಕಿರುವುದರಿಂದ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ.‌ ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ, ಆದಷ್ಟು ಶೀಘ್ರ ಗೆಜೆಟ್ ನೋಟಿಫಿಕೇಶನ್ ಹೊರಡಿಸುವಂತೆ ಕೋರಲಾಗುವುದು ಎಂದರು.

ಯುಕೆಪಿ ಮೂರನೇ ಹಂತದ ಸಂಪೂರ್ಣ ಅನುಷ್ಠಾನಕ್ಕೆ ಅಂದಾಜು ₹1 ಲಕ್ಷ ಕೋಟಿ ಅನುದಾನದ ಅಗತ್ಯ ಇದೆ. ಇಷ್ಟೊಂದು ಬೃಹತ್‌ ಮೊತ್ತದ ಯೋಜನೆ ಅನುಷ್ಠಾನದ ಉದ್ದೇಶದಿಂದ ಯುಕೆಪಿಯನ್ನು

ರಾಷ್ಟ್ರೀಯ ಯೋಜನೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.

ಯುಕೆಪಿ ರಾಷ್ಟ್ರೀಯ ಯೋಜನೆ ಆದರೆ, ಯೋಜನೆಗೆ ತಗಲುವ ವೆಚ್ಚದಲ್ಲಿ ಶೇ 60 ರಷ್ಟು ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಅಗತ್ಯ ಇರುವ ಭೂಸ್ವಾಧೀನ, ಪುನರ್ವಸತಿ ಮತ್ತು ರೈತರ ಜಮೀನಿಗೆ ನೀರು ಹರಿಸುವ ಕೆಲಸ ಶೀಘ್ರ ಆಗಬೇಕಿದೆ. ನಮ್ಮ ಐದು ವರ್ಷಗಳ ಆಡಳಿತಾವಧಿಯಲ್ಲಿ ಯೋಜನೆ ಪೂರ್ಣಗೊಳಿಸಲು ಪ್ರಥಮ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣ ಭೈರೇಗೌಡ, ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಆರ್.ಬಿ.ತಿಮ್ಮಾಪುರ ಹಾಗೂ ಅವಳಿ ಜಿಲ್ಲೆಯ ಶಾಸಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT